ಮಂಗನ ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ
ಕಾರವಾರ 18: ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾದರಿ ಪರೀಕ್ಷೆ ಕೈಗೊಂಡು, ಕಾಯಿಲೆ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ಪ್ರಸರಣ ತಡೆಯುವ ಮತ್ತು ನಿಯಂತ್ರಿಸುವ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿನ ಮನೆಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ನಿಯಮಿತವಾಗಿ ಭೇಟಿ ನೀಡಿ ಜ್ವರದ ಪ್ರಕರಣಗಳನ್ನು ಪತ್ತೆ ಹಚ್ಚುವ ಕೆಲಸ ಮಾಡುವುದರ ಜೊತೆಗೆ ಶಾಲಾ ಕಾಲೇಜುಗಳಲ್ಲಿ ಮತ್ತು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಂಗನ ಕಾಯಿಲೆ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.
ಪ್ರತಿ ತಿಂಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ವರದಿ ಪಡೆದು ಆ ಪ್ರದೇಶದಲ್ಲಿನ ಮಾಹಿತಿ ಸಂಗ್ರಹಿಸಿ ಶಂಕಿತ ಪ್ರಕರಣಗಳು ಇದ್ದಲ್ಲಿ ಕೂಡಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ತೆರಳಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅಗತ್ಯ ಹಾಸಿಗೆಯನ್ನು ಮೀಸಲಿಡುವಂತೆ ಸೂಚನೆ ನೀಡಿದರು.
ಇಲಾಖೆಗಳ ನಡುವೆ ಸಮನ್ವಯತೆ ಮುಖ್ಯವಾಗಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಅರಣ್ಯ, ಪಶುಪಾಲನಾ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣ ಇಲಾಖೆಗಳು ಸಮನ್ವಯದಿಂದ ಮಂಗನ ಕಾಯಿಲೆ ನಿಯಂತ್ರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಜುಲೈ 1 ರಿಂದ ಡಿ. 16 ರವೆರಗೆ 63 ಮಾನವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಯಾವುದೇ ಧನಾತ್ಮಕ ಪ್ರಕರಣಗಳು ಕಂಡು ಬಂದಿಲ್ಲ ಹಾಗೂ ಅಗತ್ಯ ಡೇಪಾ ತೈಲ್‌ದ ದಾಸ್ತಾನವಿದ್ದು, ತಾಲೂಕು ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿತರಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯ್ಕ ಮಾಹಿತಿ ನೀಡಿದರು.
ಜ್ವರ ಮತ್ತು ರೋಗ ಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರದ ವೈದ್ಯರನ್ನು ಸಂಪರ್ಕಿಸಬೇಕು. ವಾಸಸ್ಥಳದ ಸುತ್ತಮುತ್ತ ತೋಟ, ಕಾಡು, ಗದ್ದೆಯಲ್ಲಿ ಮಂಗ ಸತ್ತಿರುವುದು ಗಮನಕ್ಕೆ ಬಂದೊಡನೆ ಸ್ಥಳೀಯ ಆರೋಗ್ಯಾಧಿಕಾರಿಗಳು /ಆರೋಗ್ಯ ಇಲಾಖೆ ನೌಕರರಿಗೆ/ ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು. ಮಂಗ ಸಾಯುತ್ತಿರುವ ಕಾಡಿನಲ್ಲಿ ಸಂಚರಿಸುವಾಗ ಮೈ ತುಂಬಾ ಬಟ್ಟೆ ಧರಿಸಿ, ಆರೋಗ್ಯ ಇಲಾಖೆಯಿಂದ ವಿತರಿಸುವ ಡೇಪಾ ತೈಲವನ್ನು ಕೈಕಾಲುಗಳಿಗೆ ಲೇಪಿಸಿಕೊಂಡು ಹೋಗಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ಆರ್‌ಸಿಎಚ್ ಅಧಿಕಾರಿ ಡಾ.ನಟರಾಜ್, ಕುಟುಂಬ ಕಲ್ಯಾಣಾಧಿಕಾರಿ ಡಾ. ಅನ್ನಪೂರ್ಣ ವಸ್ತ್ರದ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಕ್ಯಾಪ್ಟನ್ ಡಾ. ರಮೇಶ್ ರಾವ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಮೋಹನ ಕುಮಾರ್ ಕೆ.ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿರೂಪಾಕ್ಷಗೌಡ ಪಾಟೀಲ್ ವಿವಿಧ ಇಲಾಖೆಯ ಅಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿತ್ತರರು ಇದ್ದರು.