ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಜಿಲ್ಲಾಧಿಕಾರಿ
Take precautions to avoid drinking water problems in summer: District Collector
ಕಾರವಾರ, ಫೆ.13:- ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮತ್ತು ನಗರಸ್ಥಳಿಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ಖಾಸಗಿ ಬಾವಿಗಳು, ಬಾಡಿಗೆ ಬೋರ್ ವೆಲ್ ಗಳನ್ನು ಬಳಸಿಕೊಳ್ಳುವುದು, ಟ್ಯಾಂಕರ್ ಮೂಲಕ ನೀರಿ ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.
ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮಳೆಗಾಲದಲ್ಲಿ ನೆರೆ ಪ್ರವಾಹ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ದುರಸ್ತಿ, ನಿರ್ಮಾಣ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮುದಗಾ, ಬಿಣಗಾ, ಅರಗಾ, ಚೆಂಡಿಯಾ, ಇಡೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಯಾವುದೇ ಅಡೆತಡೆಗಳು ಇಲ್ಲದಂತೆ ಅಗತ್ಯವಿರುವ ದುರಸ್ತಿ, ಡ್ರಜ್ಜಿಂಗ್ ಮತ್ತಿತರ ಕಾಮಗಾರಿಗಳನ್ನು ನಗರಸಭೆ, ಸಣ್ಣ ನೀರಾವರಿ ಇಲಾಖೆ ಮತ್ತು ತಹಸೀಲ್ದಾರ್ ಅವರು ಜಂಟಿಯಾಗಿ ಸ್ಥಳ ಪರೀಶೀಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಸೂಚಿಸಿ, ಈ ಕಾಮಗಾರಿಗಳನ್ನು ಕೈಗೊಳ್ಳಲು ಸೀಬರ್ಡ್ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವಂತೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ವ್ಯಾಪಿಯಲ್ಲಿ ಮಳೆ ನೀರಿ ನಿಲ್ಲದಂತೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದ ಅವರು, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಮುಕ್ತಾಯಗೊಳಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳು ಸಮರ್ಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರೀಶೀಲಿಸಿ, ಅವುಗಳನ್ನು ಸೂಕ್ತ ಸ್ಥಳದಲ್ಲಿ ಅಳವಡಿಸುವಂತೆ ಮತ್ತು ಕಾರ್ಯನಿರ್ವಹಿಸದೇ ಇರುವ ಯಂತ್ರಗಳನ್ನು ತಕ್ಷಣದಲ್ಲೇ ಬದಲಾಯಿಸಿ, ಹೊಸ ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಗುಡ್ಡಕುಸಿತ ತಡೆಯಲು ಕೈಗೊಂಡಿರುವ ಕಾಮಗಾರಿಗಳಿಗೆ ಈಗಾಗಲೇ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದ್ದು, ಸಂಬಂಧಪಟ್ಟ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಇಲಾಖೆಗಳು ಕೂಡಲೇ ಟೆಂಡರ್ ಕರೆದು ನಿಗಧಿತ ಅವಧಿಯಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೇಸಿಗೆಯಲ್ಲಿ ಉಷ್ಣಗಾಳಿ ಬೀಸುವ ಸಂಭವವಿದ್ದು ಈ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಉಷ್ಣ ಅಲೆ ಸಂದರ್ಭದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಕ್ರಮಗಳ ಕುರಿತಂತೆ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಸ್ವಚ್ಛವಾಹಿನಿ ವಾಹನಗಳ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿ.ಎಫ್.ಓ ರವಿಶಂಕರ್, ಸೀ ಬರ್ಡ್ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 