ಸರ್ಕಾರಿ ನೌಕರರ ಆರೋಗ್ಯ ಕಾಳಜಿ ವಹಿಸಿದ ಜಿಲ್ಲಾಡಳಿತ
ಕಾರವಾರ, 18: ಸದಾ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳ ಆರೋಗ್ಯದ ಕುರಿತಂತೆ ವಿಶೇಷ ಕಾಳಜಿ ವಹಿಸಿದ ಉತ್ತರ ಕನ್ನಡ ಜಿಲ್ಲಾಡಳಿತ ಎಲ್ಲಾ ನೌಕರರಿಗೆ ಶನಿವಾರ ಸಾಮೂಹಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ನೌಕರರು ತಮ್ಮ ಆರೋಗ್ಯದ ಕುರಿತಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಉತ್ತರ ಕನ್ನಡ ಸಹಯೋಗದಲ್ಲಿ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗಾಗಿ ಶನಿವಾರ ನಡೆದ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಸಿಬ್ಬಂದಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರು ತಮ್ಮ ರಕ್ತದೊತ್ತಡ ಪರೀಕ್ಷೆಯನ್ನು ಮಾಡಿಸಿಕೊಂಡರು.
ಆರೋಗ್ಯ ತಪಾಸಣಾ ಶಿಬಿರದಲ್ಲಿ ನೌಕರರಿಗೆ ರಕ್ತದೊತ್ತಡ, ಮಧುಮೇಹ, ಕಿವಿ, ಮೂಗು, ಗಂಟಲು, ಚರ್ಮ, ಸ್ತ್ರೀರೋಗ ತಪಾಸಣೆ, ಸರ್ಜರಿ, ಕಣ್ಣು, ಚರ್ಮ, ಇಸಿಜಿ ಪರೀಕ್ಷೆಗಳು ಸೇರಿದಂತೆ ಎಲ್ಲಾ ಅಗತ್ಯ ತಪಾಸಣೆಗಳನ್ನು ನಡೆಸುವುದರ ಜೊತೆಗೆ ತಜ್ಞ ವೈದ್ಯರಿಂದ ಸಲಹೆ ಪಡೆಯುವ ಸೌಲಭ್ಯಗಳನ್ನು ಒದಗಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರ‌್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಪ್ರಕಾಶ್ ಹಾಲಮ್ಮನವರ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.