16 ರಿಂದ 18ರ ವರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಜಿಲ್ಲೆಗೆ ಭೇಟಿ

Upalokayukta Justice B. Veerpa visited the district from 16 to 18

16 ರಿಂದ 18ರ ವರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಜಿಲ್ಲೆಗೆ ಭೇಟಿ  

ಬಳ್ಳಾರಿ 10: ಇದೇ ಜ.16, 17 ಮತ್ತು 18 ರಂದು ಬಳ್ಳಾರಿ ಜಿಲ್ಲೆಗೆ ಕರ್ನಾಟಕ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರ​‍್ಪ ಅವರು ಭೇಟಿ ನೀಡಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಲ್ಲಿಕೆಯಾದ ಲೋಕಾಯುಕ್ತ ದೂರುಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಯೊಂದಿಗೆ ಸಿದ್ದರಿರುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು.ಉಪಲೋಕಾಯುಕ್ತರ ಭೇಟಿ ಹಿನ್ನಲೆಯಲ್ಲಿ ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ದಾಖಲಾದ ದೂರು ಪ್ರಕರಣಗಳ ಕುರಿತು ಜ.18 ರಂದು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಉಪಲೋಕಾಯುಕ್ತರು ವಿಚಾರಣೆ ನಡೆಸಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ದಾಖಲೆ ಹಾಗೂ ಮಾಹಿತಿಯೊಂದಿಗೆ ಹಾಜರಾಗುವಂತೆ ಅವರು ತಿಳಿಸಿದರು. ಜ.18 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ (ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ) ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಲ್ಲಿ (ಈ ಕಚೇರಿಯಿಂದ ನೋಟಿಸ್ ಕಳುಹಿಸಿರುವ) ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಹಾಗಾಗಿ ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರಬೇಕಾಗುತ್ತದೆ. ಸಂಬಂದಪಟ್ಟ ಇಲಾಖೆ ಮುಖ್ಯಸ್ಥರು ದೂರುದಾರಿಗೆ ಈ ಕುರಿತು ಮಾಹಿತಿ ನೀಡಿ, ವಿಚಾರಣೆಗೆ ಹಾಜರಾಗುವಂತೆ ತಿಳಿಸಬೇಕು ಎಂದರು.*ಜ.17 ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ:* ಜ.17 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸುವರು. ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ, ನೌಕರರಿಂದ ತಮಗೆ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ, ನೌಕರರು ಯಾವುದೇ ತರಹದ ಭ್ರಷ್ಟಾಚಾರದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದ್ದು, ಈ ವೇಳೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ ಉಪಸ್ಥಿತರಿರಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು. *ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು:* ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರ​‍್ಪ ಅವರ ಭೇಟಿ ಹಿನ್ನಲೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಅಧಿಕಾರಿಗಳು ಉಪಲೋಕಾಯುಕ್ತರ ಭೇಟಿ ವೇಳೆ ಗೈರು ಹಾಜರಾಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಜ.16 ರಂದು ಉಪಲೋಕಾಯುಕ್ತರು ಜಿಲ್ಲೆಯ ಹಾಸ್ಟೆಲ್, ಕಚೇರಿಗಳು, ಅಂಗನವಾಡಿ ಕೇಂದ್ರ, ಆಸ್ಪತ್ರೆಗಳಿಗೆ ಅನೀರೀಕ್ಷಿತ ಭೇಟಿ ಪರೀಶೀಲನೆ ನಡೆಸುವರು. ಎಲ್ಲಾ ಅಧಿಕಾರಿಗಳು ತಮ್ಮ ಕಚೇರಿ ಸೇರಿದಂತೆ ಕಚೇರಿ ಆವರಣಗಳನ್ನು ಸ್ವಚ್ಛವಾಗಿಟ್ಟುಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಸಿ.ಸಿದ್ದರಾಜು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.