ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ತುಮಕೂರು 18: ವರದಿಗಾರಿಕೆ ವೃತ್ತಿಪರವಾಗಿದ್ದಾಗ ಸಮಾಜದ ಪರವಾಗಿರುತ್ತದೆ. ಪತ್ರಿಕಾ ವೃತ್ತಿ ಉದ್ಯಮ ಆದ ಕೂಡಲೇ ಇದರ ಉದ್ದೇಶಗಳು ಬದಲಾಗುತ್ತವೆ.ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಅಗತ್ಯ. ಊಹಾ (ಕಲ್ಪಿತ) ಪತ್ರಿಕೋದ್ಯಮ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ತುಮಕೂರು ನಗರದಲ್ಲಿ ಡಾ, ಶಿವಕುಮಾರ್ ಮಹಾಸ್ವಾಮಿಜಿ ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ತುಮಕೂರು ಜಿಲ್ಲೆ ಸಂಘದ ಸಯುಕ್ತ ಆಶ್ರಯದಲ್ಲಿ ತುಮಕೂರಿನ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ ಶನಿವಾರ ದಂದು ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ರಾಜ್ಯದ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಸಂವಿಧಾನದ ಆಶಯಗಳನ್ನು ಈಡೇರಿಸುವುದೇ ಪತ್ರಿಕಾ ವೃತ್ತಿಯ ಕರ್ತವ್ಯ. ಧ್ವನಿ ಇಲ್ಲದವರ ಪರವಾಗಿ ವೃತ್ತಿ ಇದ್ದಾಗ ಸಮಾಜಕ್ಕೆ ಅನುಕೂಲ. ಸಮಾಜದಲ್ಲಿರುವ ಮೇಲು, ಕೆಳ ಜಾತಿಗಳ ನಡುವಿನ ತಾರತಮ್ಯ ಮತ್ತು ಅಸಮಾನತೆ ಕೊನೆಯಾಗುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸಿ ಎಂದು ಕರೆ ನೀಡಿದರು.ಈಗ ವೇದಿಕೆಯಲ್ಲಿ ಬಿಡುಗಡೆಯಾದ ನಿಮ್ಮದೇ ವಿಶೇಷ ಸಂಚಿಕೆ ನೀವೂ ಓದಿ. ಪತ್ರಕರ್ತರ ಕರ್ತವ್ಯ , ಸವಾಲುಗಳ ಪಟ್ಟಿ ಇದೆ. ಅದನ್ನು ಓದಿ, ಪಾಲಿಸಿ ಎಂದರು, ಜನ ಪತ್ರಕರ್ತರ ಮೇಲೆ ನಂಬಿಕೆ ಇಟ್ಟಿದ್ದಾರೆ. ಮೌಡ್ಯದ ಸುದ್ದಿಗಳನ್ನು , ಚರ್ಚೆಗಳನ್ನು ನಡೆಸಿ ನೋಡುಗರ, ಓದುಗರ ದಾರಿ ತಪ್ಪಿಸಬೇಡಿ ಎಂದರು. ವಿಜ್ಞಾನ, ತಂತ್ರಜ್ಞಾನದ ವೇಗದಲ್ಲೇ ಪತ್ರಿಕೋದ್ಯಮ ಬೆಳೆಯುತ್ತಿದೆ. ಇದು ಅವಕಾಶ , ಸವಾಲು ಎರಡೂ ಆಗಿದೆ ಎಂದರು. ದೇಶದ ಪ್ರತಿಯೊಬ್ಬರೂ ಸಂವಿಧಾನ ಓದಬೇಕು. ಆಗ ಹಕ್ಕು-ಕರ್ತವ್ಯ ಎರಡೂ ಗೊತ್ತಾಗುತ್ತದೆ. ನಿಮ್ಮದು ಶಕ್ತಿಯುತ ಮಾಧ್ಯಮ. ಜನ ನಿಮ್ಮ ಕಡೆ ನೋಡ್ತಾ ಇದ್ದಾರೆ. ಈ ಎಚ್ಛರಿಕೆ ಸದಾ ಇರಲಿ ಎಂದರು. ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಸದ್ಯದಲ್ಲೇ ನಿಮ್ಮ ಕೈ ಸೇರಲಿದೆ, ಪತ್ರಕರ್ತರ ಕುಟುಂಬಕ್ಕೆ ಆರೋಗ್ಯ ವಿಮೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗುವುದು. ಪತ್ರಕರ್ತರ ಮಾಸಾಶನವನ್ನೂ 3 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರಾಜ್ಯ ಪ್ರಧಾನ ಕಾರ್ಯದರ್ಶಿ ಜಿಸಿ ಲೋಕೇಶ್ ರಾಷ್ಟ್ರೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿವಿ ಮಲ್ಲಿಕಾರ್ಜುನಯ್ಯ ರಾಜ್ಯ ಪದಾಧಿಕಾರಿಗಳಾದ ಭವಾನಿಸಿಂಗ್ ಠಾಕೂರ್, ಮತ್ತಿಕೆರೆ ಜಯರಾಮ್ ಪುಟ್ಟಪ್ಪ ತುಮಕೂರು ಸಂಘದ ಜಿಲ್ಲಾ ಅಧ್ಯಕ್ಷ ಪುರುಷೋತ್ತಮ್ ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು ರಾಜ್ಯದ ಎಲ್ಲಾ 31 ಜಿಲ್ಲೆ ಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸಂಘದ ಸದಸ್ಯ ಪಾತ್ರ ಕರ್ತರು ಪದಾಧಿಕಾರಿಗಳು ಪಾಲ್ಗೊಂಡಿದ್ದರು ತುಮಕೂರು ಜಿಲ್ಲಾ ಸಂಘದ ವತಿಯಿಂದ ಎಲ್ಲಾ ವ್ಯವಸ್ಥೆ ಉತ್ತಮವಾಗಿತ್ತು ಮೊದಲನೇ ದಿನದ ಸಮ್ಮೇಳನದ ಉದ್ಘಾಟನಾ ಸಮಾರಂಭ ಒಟ್ಟಾರೆ ಯಶಸ್ವಿಯಾಗಿ ಜರುಗಿತು.