ಲೋಕದರ್ಶನ ವರದಿ
ವಿಜಯಪುರ 09: ವೃಂದ ಹಾಗೂ ನೇಮಕಾತಿ ನಿಯಮಗಳನ್ನು ಬದಲಾವಣೆ ಮಾಡಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿಜಯಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ಕರ್ತವ್ಯದಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು.
ನಗರದ ಸಿದ್ದೇಶ್ವರ ದೇವಾಲಯದಿಂದ ಸಹಸಾರು ಶಿಕ್ಷಕರು ರ್ಯಾಲಿ ಮೂಲಕ ಡಿಡಿಪಿಐ ಕಚೇರಿಗೆ ತೆರಳಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ. ಗೌಡರ ಮಾತನಾಡಿ, ಪದವೀಧರ ಶಿಕ್ಷಕರ ಹಾಗೂ ಶಿಕ್ಷಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ನ್ಯಾಯಯುತವಾಗಿರುವ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದರು.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕಳೆದ ವರ್ಷ ನವೆಂಬರ್ 16 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಶಿಕ್ಷಕರ ಸಮಾವೇಶದಲ್ಲಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ವರ್ಷಗಳು ಉರುಳಿದರೂ ಬೇಡಿಕೆ ಈಡೇರಿಕೆಯಾಗಿಲ್ಲ, ಹೀಗಾಗಿ ಹೋರಾಟದ ಹಾದಿ ಹಿಡಿಯುವುದು ಅನಿವಾರ್ಯವಾಗಿದೆ ಎಂದರು.
2014 ಕ್ಕಿಂತ ಮೊದಲು ನೇಮಕವಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು 1 ರಿಂದ 5 ನೇ ವರ್ಗಕ್ಕೆ ಸೀಮಿತಗೊಳಿಸಿದ ಆದೇಶವನ್ನು ತಕ್ಷಣ ರದ್ದುಗೊಳಿಸುವುದು, ಹಾಗೂ ನೇಮಕಾತಿ ನಿಯಮಗಳನ್ನು ಬದಲಾವಣೆ ಮಾಡಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸುವುದು, ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸುವುದು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನೂನ್ಯತೆಯನ್ನು ಸರಿಪಡಿಸುವುದು, ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರ್ಜುನ ಲಮಾಣಿ ಮಾತನಾಡಿದರು. ಶಿಕ್ಷಕ ಸಂಘಟನೆ ಪ್ರಮುಖರಾದ ಸುರೇಶ ಶೇಡಶ್ಯಾಳ, ಜುಬೇರ ಕೆರೂರ, ಬಿ.ಎನ್. ಪಾಟೀಲ, ಎಸ್.ಬಿ. ಪಾಟೀಲ, ಹಣಮಂತ ಕೊಣದಿ ಮೊದಲಾದವರು ಪಾಲ್ಗೊಂಡಿದ್ದರು.
ರೋಟರಿ ಕ್ಲಬ್: ಅಧ್ಯಕ್ಷ, ಕಾರ್ಯದರ್ಶಿಗಳ ಪದಗ್ರಹಣ