ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ: ವಿಜಯ್ ಕುಮಾರ್

Work hard for the future of children: Vijay Kumar

ಮಕ್ಕಳ ಭವಿಷ್ಯಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿ: ವಿಜಯ್ ಕುಮಾರ್ 

ಬಳ್ಳಾರಿ 13: ಮಕ್ಕಳ ಪಾಲನಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಪ್ತಸಮಾಲೋಚಕರು, ಗೃಹಪಾಲಕ, ಗೃಹಪಾಲಕಿಯರು ಹಾಗೂ ಸಿಬ್ಬಂದಿಗಳು ಮಕ್ಕಳನ್ನು ಅರ್ಥಮಾಡಿಕೊಂಡು ಅವರ ಉತ್ತಮ ಭವಿಷ್ಯಕ್ಕಾಗಿ ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್‌.ವಿಜಯ ಕುಮಾರ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ನೋಂದಾಣಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿ.ಡಿ.ಡಿ.ಎಸ್ ಸಭಾಂಗಣದಲ್ಲಿ ಗುರುವಾರ ಏರಿ​‍್ಡಸಿದ್ದ ‘ಬಾಲನ್ಯಾಯ(ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ-2015, ದತ್ತು ಪ್ರಕ್ರಿಯೆ ಮತ್ತು ಮಕ್ಕಳ ರಕ್ಷಣೆ’ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳನ್ನು ಸಕರಾತ್ಮಕ ಕಾರ್ಯಚಟುವಟಿಕೆಗಳಲ್ಲಿ ಸಂಪೂರ್ಣವಾಗಿ ತೊಡಗಿಸಬೇಕು. ಮಕ್ಕಳು ಸಂಸ್ಥೆಯಲ್ಲಿ ಇದ್ದಾಗ ಮತ್ತು ಶಾಲೆಗೆ ಹೊದಂತಹ ಸಂದರ್ಭದಲ್ಲಿ ಮಕ್ಕಳ ಮೇಲೆ ನಿಗಾ ಇಡಬೇಕು ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣೆ ಪೋಷಣೆಯಲ್ಲಿ ಸಿಬ್ಬಂದಿಗಳ ಪಾತ್ರ ಬಹು ಮುಖ್ಯವಾಗಿದೆ. ಮಕ್ಕಳ ಪ್ರತಿಯೊಂದು ವೈಯಕ್ತಿಕ ಕಡತ ನಿರ್ವಹಿಸುವ ಕುರಿತು ಹಾಗೂ ಮಕ್ಕಳೊಂದಿಗೆ ಸಮಲೋಚನೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸಬೇಕಾಗಿರುವುದರಿಂದ ತರಬೇತಿ ಹೊಂದಬೇಕು ಎಂದು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಜಲಾಲಪ್ಪ ಅವರು ಮಾತನಾಡಿ, ತರಬೇತಿಯಲ್ಲಿ ಭಾಗಿದಾರರು ಹೆಚ್ಚಿನ ಮಾಹಿತಿ ಪಡೆದುಕೊಳ್ಳಬೇಕು. ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಕಂಡುಬರುವ ಸಮಸ್ಯೆಗಳ ಕುರಿತು ಚರ್ಚಿಸಿ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಪಡೆದುಕೊಳ್ಳಬೇಕು. ಈ ಮೂಲಕ ತಮ್ಮ ಸಾಮರ್ಥ್ಯ ವೃದ್ಧಿಸಿಕೊಂಡು ಮಕ್ಕಳ ರಕ್ಷಣೆ ಮತ್ತು ಪೋಷಣೆಯಲ್ಲಿ ಇನ್ನೂ ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಬೇಕೆಂದು ತಿಳಿಸಿದರು.  ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮಿ ಮೈದೂರು ಅವರು ಮಾತನಾಡಿ ಬಾಲ್ಯವಿವಾಹ, ಪೋಕ್ಸೋ, ಪ್ರಕರಣಗಳನ್ನು ತಡೆಯುವಲ್ಲಿ ಸಹಭಾಗಿದಾರರ ಪಾತ್ರ ಬಹಳ ಮುಖ್ಯವಾಗಿದೆ ಹಾಗೂ ಸಂಕಷ್ಠದಲ್ಲಿರುವ ಮಕ್ಕಳ ರಕ್ಷಣೆ ಮತ್ತು ಪುರ್ನವಸತಿ ಒದಗಿಸುವ ಕುರಿತು ಪರಿಪೂರ್ಣವಾಗಿ ಅರಿಯಬೇಕು ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯರಾದ ಹೆಚ್‌.ಸಿ.ರಾಘವೇಂದ್ರ ಅವರು ಮಕ್ಕಳ ಹಕ್ಕುಗಳು ಹಾಗೂ ಮಕ್ಕಳಿಗೆ ಸಂಬಂಧಿತ ಕಾನೂನುಗಳ ಕುರಿತು ವಿಷಯ ಮಂಡಿಸಿದರು. ವಕೀಲರಾದ ಶಿವಲೀಲಾ ಅವರು “ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಥಿಕಾರದ ಯೋಜನೆಗಳ” ಕುರಿತು ಸಂಪೂರ್ಣ ಮಾಹಿತಿ ನೀಡಿದರು.  ತರಬೇತಿ ಕಾರ್ಯಕ್ರಮದಲ್ಲಿ ಉಪ ನೋಂದಣಿ ಅಧಿಕಾರಿ ದೇವೆಂದ್ರ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಂಜುನಾಥ, ಮಕ್ಕಳ ರಕ್ಷಣಾಧಿಕಾರಿ ಚನ್ನಬಸಪ್ಪ ಪಾಟೀಲ್, ಮಂಜುನಾಥ, ಅಂಗನವಾಡಿ ಮೇಲ್ವಿಚಾರಕರಾದ ಕ್ಯಾತ್ಯಾಯಿನಿ, ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕ ಕೆ.ಆನಂದ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಮಕ್ಕಳ ಸಹಾಯವಾಣಿಯ ಸಿಬ್ಬಂದಿ, ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿ ಹಾಗೂ 60 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದ್ದರು.