ರಾಮದುರ್ಗ 07: ತಾಲೂಕನ್ನು ಬರಪೀಡಿತವೆಂದು ಸರಕಾರ ಘೋಷಣೆ ಮಾಡಿ, ಬರ ನಿರ್ವಹಣೆಗೆ ವಿಶೇಷ ಅನುದಾನ ನೀಡಿದೆ. ಅದರ ಸದುಪಯೋಗವಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
ಪಟ್ಟಣದ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಬರ ನಿರ್ವಹಣೆ ಕುರಿತು ಏರ್ಪಡಿಸಿದ ತಾಲೂಕಾ ಮಟ್ಟದ ಅಧಿಕಾರಿಗಳ ಹಾಗೂ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಸಂಬಂಧಿಸಿದಂತೆ ಹೊಸ ಬೋರ್ವೆಲ್, ಪೈಪ್ಲೈನ್ ಕನೆಕ್ಷನ್ಗೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಯೋಜನೆ ಹಾಕಿಕೊಂಡು ಶೀಘ್ರ ಯೋಜನೆ ಅನುಷ್ಠಾನಗೊಳಿಸಬೇಕು. ಅದಕ್ಕೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕು. ಗ್ರಾಮೀಣ ಪ್ರದೇಶದ ಜನತೆಗೆ ಕೆಲಸ ನೀಡಿ ಅವರನ್ನು ಗೂಳೆ ಹೋಗದಂತೆ ತಡೆಯಲು ಪಿಡಿಓಗಳು ವಿವಿಧ ಕಾಮಗಾರಿಗಳನ್ನು ಕೈಗೊಳ್ಳಬೇಕು. ಜಾನುವಾರುಗಳಿಗೆ ಮೇವಿನ ಸಮಸ್ಯೆಯಾಗದಂತೆ ಸೂಕ್ತ ಸ್ಥಳದಲ್ಲಿ ಗೋಶಾಲೆ ಪ್ರಾರಂಭಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತೆಗೆದುಕೊಂಡ ಕ್ರಮ ಹಾಗೂ ಸಮಸ್ಯೆಗಳನ್ನು ಎದುರಿಸುವ ಗ್ರಾಮಗಳಲ್ಲಿ ಬೋರ್ವೆಲ್ ಕೊರೆಯಿಸುವ, ಬೋರವೆಲ್ದಿಂದ ನೀರಿನ ಸಂಪರ್ಕ ಕಲ್ಪಿಸಲು ಪೈಪ್ಲೈನ್ ವ್ಯವಸ್ಥೆ ಮಾಡುವ ಕುರಿತು ಪಿಡಿಓಗಳಿಂದ ಮಾಹಿತಿ ಪಡೆದು ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎ.ಎಸ್ ಹಲಸೋಡೆ ಸಭೆಗೆ ತಿಳಿಸಿದರು.
ಬಾಕ್ಸ್ಃ
ಬರ ನಿರ್ವಹಣೆಗಾಗಿ ಸರಕಾರ ವಿಶೇಷ ಅನುದಾನ ನೀಡಿದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ತೊಂದರೆಯಾಗದಂತೆ 24 ಗಂಟೆಯೊಳಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಬೇಕು. ಒಂದು ವೇಳೆ ಜನಸಾಮಾನ್ಯದಿಂದ ದೂರು ಕೇಳಿಬಂದಲ್ಲಿ ಅಧಿಕಾರಿಗಳೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಶಾಸಕ ಮಹಾದೇವಪ್ಪ ಯಾದವಾಡ ಖಡಕ್ ಎಚ್ಚರಿಕೆ ನೀಡಿದರು.
ಬಾಕ್ಸ್ಃ
ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿದರೆ ಶಾಸಕರನ್ನು ಕೇಳಿ ಎಂದು ಬೇಜವಾಬ್ದಾರಿಯುತ ಹೇಳಕೆ ನೀಡುವುದು ಸರಿಯಲ್ಲ. ಸಮಸ್ಯೆ ಕುರಿತು ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಉದಪುಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಚನ್ನಮ್ಮ ಕೊಪ್ಪದ ಹಾಗೂ ಜಾಲಿಕಟ್ಟಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದ ಕಿತ್ತೂರ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮಹಾಂತೇಶ ಬಳ್ಳಾರಿ ಅವರನ್ನು ಶಾಸಕರು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ತಹಶೀಲ್ದಾರ ಆರ್.ವ್ಹಿ. ಕಟ್ಟಿ, ತಾ.ಪಂ ಕಾರ್ಯನಿವರ್ಾಹಕ ಅಧಿಕಾರಿ ಅಶೋಕ ಪಾಟೀಲ, ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಎ.ಎಸ್ ಹಲಸೋಡೆ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಇತರರಿದ್ದರು.