ಬಜೆಟ್ನಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಅಭಿವೃದ್ಧಿಗೆ 72,093 ಕೋಟಿ ರೂ.: ಯಡಿಯೂರಪ್ಪ

ಬೆಂಗಳೂರು, ಮಾ.5, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು, ಅಲ್ಪಸಂಖ್ಯಾತರ ಅಭಿವೃದ್ಧಿಗೆ 72,093 ಕೋಟಿ ರೂ. ಒದಗಿಸಲಾಗಿದೆ.ವಿಧಾನಸಭೆಯಲ್ಲಿಂದು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಮಾಜದ ಎಲ್ಲಾ ಸ್ತರಗಳಲ್ಲಿರುವ ಸಮುದಾಯಗಳ ಅಭಿವೃದ್ಧಿಯಿಂದ ಮಾತ್ರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಶೋಷಿತ, ದುರ್ಬಲ ವರ್ಗಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡುತ್ತದೆ ಎಂದರು.ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಎಸ್ಸಿಎಸ್ಪಿ/ ಟಿಎಸ್ಪಿ  ಅಡಿ 26,930 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಇದು ನಿಯಮಾನುಸಾರ ಹಂಚಿಕೆ ಮಾಡಬೇಕಾದ  ಮೊತ್ತಕ್ಕಿಂತ ಹೆಚ್ಚಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ನಮ್ಮ ಸರ್ಕಾರ ನೀಡುತ್ತಿರುವ ಪ್ರಾಮುಖ್ಯತೆಗೆ ಇದು ಸಾಕ್ಷಿಯಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಕರ್ನಾಟಕ  ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ವಸತಿ ಶಾಲೆಗಳಲ್ಲಿ ಆಯಾ ತಾಲ್ಲೂಕಿನ  ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 25 ರಷ್ಟು ಸೀಟು ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು. ಈ ವಸತಿ ಶಾಲೆಗಳಿಗೆ  ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ ಮಾಡಲಾಗುವುದು. ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ರಸ್ತೆ ಸಾರಿಗೆ  ನಿಗಮಗಳ ಮೂಲಕ ವಾಹನ ಚಾಲನಾ ತರಬೇತಿ, ವಿವಿಧ ಪ್ಯಾರಾಮೆಡಿಕಲ್ ಸರ್ಟಿಫಿಕೇಟ್  ಕೋರ್ಸುಗಳೊಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ಸಣ್ಣ ಸರಕು ಸಾಗಾಣಿಕೆ ವಾಹನ  ಖರೀದಿಗೆ ಸಾಲದ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ  ಚಟುವಟಿಕೆಗಳಿಗಾಗಿ ನೀಡುವ ಷೇರು ಬಂಡವಾಳ ದ್ವಿಗುಣಗೊಳಿಸಿ 20 ಲಕ್ಷ ರೂ. ಗಳಿಗೆ  ಹೆಚ್ಚಳ ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ  ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ, ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ  ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಒಂದು ಲಕ್ಷ ರೂ. ನಗದು ಪ್ರಶಸ್ತಿ ನೀಡಲು ಕ್ರಮ. 60  ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಪ್ರಕಟಿಸಿದರು.

ಶಿವಮೊಗ್ಗ  ಮತ್ತು ಮೈಸೂರು ಜಿಲ್ಲೆಗಳಲ್ಲಿ ಬುಡಕಟ್ಟು ಜನರ ಪಾರಂಪರಿಕ ವೈದ್ಯಪದ್ಧತಿ ಮತ್ತು  ಆಚರಣೆಗಳ ದಾಖಲೀಕರಣ ಮತ್ತು ಆಯ್ದ ಔಷಧಿಗಳ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಎರಡು ಕೋಟಿ  ರೂ. ಅನುದಾನ ನೀಡಲಾಗುವುದು.“ಚರ್ಮ ಶಿಲ್ಪ”  ಎಂಬ ಯಂತ್ರಾಧಾರಿತ ಉತ್ಪಾದನಾ ಘಟಕಗಳ ಸ್ಥಾಪನೆಗೆ 250 ಚರ್ಮ ಕುಶಲಕರ್ಮಿಗಳಿಗೆ ಡಾ||  ಬಾಬು ಜಗಜೀವನ್ರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಘಟಕ ವೆಚ್ಚ 10 ಲಕ್ಷ  ರೂ.ಗಳಲ್ಲಿ ಐದು ಲಕ್ಷ ರೂ. ಸಹಾಯಧನ. 12.50 ಕೋಟಿ ರೂ. ಅನುದಾನ ನೀಡಲಾಗುವುದು. ಅಲೆಮಾರಿ/ಅರೆ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 78 ಕೋಟಿ ರೂ. ಅನುದಾನ ನೀಡಲಾಗುವುದು. ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಹಾಗೂ ವಿವಿಧ ನಿಗಮಗಳಿಗೆ 125 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದರು.ಇ-ವಾಣಿಜ್ಯ  ಉತ್ಪನ್ನಗಳನ್ನು ಸರಬರಾಜು ಮಾಡುವ ಯುವಕರಿಗೆ ಬೈಕ್ ಕೊಳ್ಳಲು ಡಿ. ದೇವರಾಜ ಅರಸು  ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾವಿರ ಯುವಕರಿಗೆ ತಲಾ 25,000 ರೂ.ಗಳಂತೆ  2.5 ಕೋಟಿ ರೂ. ಆರ್ಥಿಕ ನೆರವು ನೀಡಲಾಗುವುದು. ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಅಧಿಸೂಚಿತವಲ್ಲದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ ನಿಡಲಾಗುವುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಐದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪದವಿ ಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುವುದು, ಕ್ರೈಸ್ತ ಸಮುದಾಯದವರ ಸರ್ವತೋಮುಖ ಅಭಿವೃದ್ಧಿಗೆ 200 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ಅಪೂರ್ಣ ಹಂತದ ಎರಡು ಲಕ್ಷ ಮನೆಗಳನ್ನು ಪೂರ್ಣಗೊಳಿಸಿ, ವಸತಿ ರಹಿತರಿಗೆ ಹಂಚಿಕೆ ಮಾಡಲು 2500 ಕೋಟಿ ರೂ. ಒದಗಿಸಲಾಗುವುದು. ಸರ್ಕಾರದ  ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಿಕೊಂಡು ಹತ್ತು ವರ್ಷವಾಗಿದ್ದಲ್ಲಿ, ರಾಜೀವ್  ಗಾಂಧಿ ವಸತಿ ನಿಗಮಕ್ಕೆ ಅಡಮಾನವಿಡಲಾದ ನಿವೇಶನವನ್ನು ಡೀಮ್ಡ್ ರಿಲೀಸ್ ಎಂದು ಪರಿಗಣಿಸಲು  ಕ್ರಮ ಕೈಗೊಳ್ಳಲಾಗುವುದು. ಒಂದೇ ಸೂರಿನಡಿ ಪೂರ್ವ  ಪ್ರಾಥಮಿಕ ತರಗತಿಗಳಿಂದ ಪದವಿಪೂರ್ವ ತರಗತಿವರೆಗೆ ಶಿಕ್ಷಣ ನೀಡುವ 276 ಕರ್ನಾಟಕ  ಪಬ್ಲಿಕ್ ಶಾಲೆಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.

ನಬಾರ್ಡ್  ಸಹಯೋಗದಲ್ಲಿ 758 ಕೋಟಿ ರೂ. ವೆಚ್ಚದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ 26 ಜಿಲ್ಲೆಗಳ  3386 ಸರ್ಕಾರಿ ಶಾಲೆಗಳ 6469 ಶಾಲಾ ಕೊಠಡಿಗಳ ಪುನರ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಶಾಸಕರು ತಮ್ಮ ಕ್ಷೇತ್ರದ ವ್ಯಾಪ್ತಿಯ ತಲಾ ಮೂರು ಶಾಲೆಗಳ ದತ್ತು ಸ್ವೀಕಾರ ಮತ್ತು ಅಭಿವೃದ್ಧಿಗೆ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕ್ರಮ ಕೈಗೊಳ್ಳಲಾಗುವುದು. ಪ್ರತಿ ತಿಂಗಳಲ್ಲಿ ಎರಡು ಶನಿವಾರಗಳಂದು ಬ್ಯಾಗ್ ರಹಿತ ದಿನ, “ಸಂಭ್ರಮ ಶನಿವಾರ” ಆಚರಣೆ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.ದಾವಣಗೆರೆ, ಉಡುಪಿ ಮತ್ತು ದೊಡ್ಡಬಳ್ಳಾಪುರದಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ ನೀಡಲಾಗುವುದು. ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು “ಶಿಕ್ಷಕ ಮಿತ್ರ” ಎಂಬ ಮೊಬೈಲ್ ಆ್ಯಪ್ ಅಭಿವೃದ್ಧಿ ಪಡಿಸಲಾಗುವುದು. 400 ಸರ್ಕಾರಿ ಉರ್ದು ಶಾಲೆಗಳಲ್ಲಿ ಉರ್ದು ಮಾಧ್ಯಮದೊಂದಿಗೆ ಆಂಗ್ಲ ಮಾಧ್ಯಮ ಪ್ರಾರಂಭಕ್ಕೆ ಒಂದು ಕೋಟಿ ರೂ. ಅನುದಾನ, ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು ಐ.ಐ.ಟಿ. ಮಾದರಿಯಲ್ಲಿ ಸ್ವಾಯತ್ತಗೊಳಿಸಿ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನ ನೀಡಲಾಗುವುದು. ತಂತ್ರಜ್ಞಾನದ  ನೆರವಿನಿಂದ ರಾಜ್ಯದ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಆಡಳಿತ ವ್ಯವಸ್ಥೆಯ ಸಮರ್ಥ  ನಿರ್ವಹಣೆಗೆ ಒಂದು ಕೋಟಿ ರೂ.ಗಳ ವೆಚ್ಚದಲ್ಲಿ ಶಾಶ್ವತ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದರು.