ಕೊಪ್ಪಳ 16: ಇದೇ ಜ. 19ರಂದು ಮಹಾಯೋಗಿ ವೇಮನ ಅವರ ಜಯಂತಿಯನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ನಗರದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು.
ಮಹಾಯೋಗಿ ವೇಮನ ಜಯಂತಿ ಆಚರಣೆ ಕುರಿತಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾಯೋಗಿ ವೇಮನರ ಜಯಂತಿಯನ್ನು ಜ. 19ರಂದು ರಂದು ಬೆಳಿಗ್ಗೆ 10-30 ಗಂಟೆಗೆ ಕಿನ್ನಾಳ ರಸ್ತೆಯ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಆಚರಿಸಲಾಗುವುದು. ಕಾರ್ಯಕ್ರಮದಲ್ಲಿ ಮಹಾಯೋಗಿ ವೇಮನರ ಕುರಿತು ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ವೇದಿಕೆ ಮೇಲಿರುವ ಎಲ್ಲಾ ಗಣ್ಯರಿಗೆ ವೇಮನರ ಕುರಿತಾದ ಕಿರು ಪುಸ್ತಕವನ್ನು ನೀಡಲಾಗುವುದು. ಸಮಾಜ ಬಾಂಧವರು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಾರ್ಯಕ್ರಮ ದಿನದಂದು ಸ್ವಚ್ಛತೆ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯವರು ಕಲ್ಪಿಸಿಕೊಡಬೇಕು ಎಂದು ಅವರು ಹೇಳಿದರು.
ಶಿವಯೋಗಿ ಸಿದ್ದರಾಮೇಶ್ವರ ಜಯಂತಿ: ಶಿವಯೋಗಿ ಸಿದ್ದರಾಮೇಶ್ವರರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಜನವರಿ 29ರಂದು ಸಾಹಿತ್ಯ ಭವನದಲ್ಲಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 10-30 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ಶಿವಯೋಗಿ ಸಿದ್ದರಾಮೇಶ್ವರರ ಕುರಿತು ವಿಶೇಷ ಉಪನ್ಯಾಸ ನಡೆಯಲಿದೆ. ಜಯಂತಿ ಆಚರಣೆ ಕಾರ್ಯಕ್ರಮ ದಿನದಂದು ರಸ್ತೆ ಸ್ವಚ್ಛತೆ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆ ವತಿಯಿಂದ ಕಲ್ಪಿಸಲಾಗುವುದು. ಪೊಲೀಸ್ ಇಲಾಖೆಯಿಂದ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಕಾರ್ಯಕ್ರಮದ ಯಶಸ್ವಿಗೆ ಸಮಾಜದ ಎಲ್ಲಾ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
21ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಜ. 21ರಂದು ನಗರದ ಸಾಹಿತ್ಯ ಭವನದಲ್ಲಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದ್ದು, ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮೆರವಣಿಗೆ ಹಾಗೂ ಸಮಾರಂಭದಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೇ ಪಾಲ್ಗೊಳ್ಳಬೇಕು. ಕಾರ್ಯಕ್ರಮಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕುರಿತಾಗಿ ನಗರಸಭೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ತಹಶೀಲ್ದಾರ ಜೆ.ಬಿ. ಮಜ್ಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ದಲಿಂಗೇಶ ಕೆ.ರಂಗಣ್ಣನವರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ, ಸಮುದಾಯದ ಮುಖಂಡರಾದ ಬಾಳಪ್ಪ ಬಾರಕೇರ, ಗಂಗಾದರ ಕಟ್ಟೆ, ಶೇಖರಪ್ಪ ಸಿಂದೋಗಿ, ಮರಿಯಪ್ಪ, ಮಂಜುನಾಥ, ರಾಜು ಕಲೆಗಾರ, ಸೋಮು ಆರ್.ಎಚ್., ವಸಂತ ಕುಮಾರ, ಕುಮಾರ ಸ್ವಾಮಿ ಬಾರಕೇರ ಮತ್ತಿತರರು ಉಪಸ್ಥಿತರಿದ್ದು, ಉಪಯುಕ್ತ ಸಲಹೇ ಸೂಚನೆಗಳನ್ನು ನೀಡಿದರು.