ಸಿಬಿಐ, ಇಡಿ ದುರ್ಬಳಕೆ ಮೂಲಕ ಸಂವಿಧಾನಕ್ಕೆ ಅಪಚಾರ: ಸುಭಾಷ್ ರಾಠೋಡ್ ಆರೋಪ

ಸಿಬಿಐ, ಇಡಿ ದುರ್ಬಳಕೆ ಮೂಲಕ ಸಂವಿಧಾನಕ್ಕೆ ಅಪಚಾರ: ಸುಭಾಷ್ ರಾಠೋಡ್ ಆರೋಪ  Abuse of Constitution by CBI, ED: Accused by Subhash Rathore

ಹೂವಿನಹಡಗಲಿ 27: ಕೇಂದ್ರದ ಬಿಜೆಪಿ ಸರ್ಕಾರ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸಂವಿಧಾನಕ್ಕೆ ಅಪಚಾರ ಎಸಗಿ ದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಸುತ್ತಿದೆ ಎಂದು ಕೆಪಿಸಿಸಿ ವೀಕ್ಷಕರಾದ ಸುಭಾಷ್ ರಾಠೋಡ್ ಆರೋಪಿಸಿದರು.  

ಪಟ್ಟಣದ ದ್ರಾಕ್ಷಾಯಿಣಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಸಂಘಟನಾ ಸೃಜನ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಬೂತ್ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸುವ ಅಗತ್ಯವಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಕರೆ ನೀಡಿದರು.  

ಎಐಸಿಸಿ ನಾಯಕ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕೆ. ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಕಾರ್ಯಕರ್ತರ ಅಭಿಪ್ರಾಯಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಅದನ್ನು ಆಧರಿಸಿ ಜಿಲ್ಲಾ ಅಧ್ಯಕ್ಷರ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು.  

ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದರು.  

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಿರಾಜ್ ಶೇಖ್ ಮಾತನಾಡಿ, ಪಕ್ಷದ ಸಂಘಟನೆಗೆ ಕಾರ್ಯಕರ್ತರೇ ಶಕ್ತಿ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕೆಂದು ಹೇಳಿದರು.