ಅಪಘಾತವಾದ ಕಾರಿಗೂ, ಶಿಕ್ಷಣ ಸಂಸ್ಥೆಗೂ ಸಂಬಂಧವಿಲ್ಲ: ಆರ್ ಅಶೋಕ್

ಬೆಂಗಳೂರು, ಫೆ 13 ;  ಕಳೆದ ಮೂರು ದಿನಗಳ ಹಿಂದೆ ಅಪಘಾತ ಸಂಭವಿಸಿದ ಕಾರಿಗೂ, ನೋಂದಣಿಯಾದ ಶಿಕ್ಷಣ ಸಂಸ್ಥೆಗೂ ಯಾವುದೇ ಸಂಬಂಧವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ‌ ಸ್ಪಷ್ಟಪಡಿಸಿದ್ದಾರೆ.

ಈ ಅಪಘಾತದಲ್ಲಿ ಸಚಿವ ಆರ್ ಅಶೋಕ್ ಅವರ ಪುತ್ರ ಶರತ್ ಹೆಸರು ಎಲ್ಲೆಡೆ ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಹಂಪಿಯಿಂದ ಬರುತ್ತಿರುವಾಗ ಬಳ್ಳಾರಿಯ ಭಾಗದಲ್ಲಿ ಅಪಘಾತವಾಗಿದ್ದು, ಇಬ್ಬರು ಸಾವನ್ನಪ್ಪಿರುವುದು ನೋವಿನ ಸಂಗತಿ. 

ಕಾರಿಗೂ ಆ ಶಿಕ್ಷಣ ಸಂಸ್ಥೆಗೂ   ಯಾವುದೇ ಸಂಬಂಧವಿಲ್ಲ ಎಂದರು.

ಮಾಧ್ಯಮಗಳಲ್ಲಿ ನನ್ನ ಹೆಸರು ಬಂದಿದ್ದರಿಂದ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಅಪಘಾತದ ಬಳಿಕ ಸಾವನ್ನಪ್ಪಿದ ಯುವಕನ ಕುಟುಂಬಸ್ಥರೇ ಆ್ಯಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣ ತನಿಖಾ ಹಂತದಲ್ಲಿ ಇರುವುದರಿಂದ, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣದಲ್ಲಿ ಎಷ್ಟೇ ದೊಡ್ಡವರಿರಲಿ, ಸಣ್ಣವರಿರಲಿ ಕಾನೂನು ದೃಷ್ಟಿಯಲ್ಲಿ ಎಲ್ಲರೂ ಒಂದೇ. ನಾನು ಸಚಿವನಾಗಿರಬಹುದು. ನನಗೂ ಕಾನೂನು ಒಂದೇ. ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಹೆಚ್ಚು ಮಾತನಾಡುವುದಿಲ್ಲ. ಇದರಲ್ಲಿ ನಾನು ಯಾವುದೇ ರಾಜಕೀಯ ಮಾಡುವುದಿಲ್ಲ. ಕಾನೂನು ಮೀರಿ ಯಾರು ಇಲ್ಲ. ತನಿಖೆ ವೇಳೆ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳುತ್ತಾರೆ ಎಂದರು.

ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು ಮತ್ತು ಎಲ್ಲರೂ ಗಾಯಗೊಂಡಿದ್ದಾರೆ. ಪೊಲೀಸರ ತನಿಖೆ ವೇಳೆ ಎಲ್ಲವೂ ಬಹಿರಂಗವಾಗಲಿದೆ. ಹಾಗಾಗಿ ಅಪಘಾತಕ್ಕೆ ಸಂಬಂಧಿಸಿದಂತೆ ಪರ ಮತ್ತು ವಿರೋಧ ಮಾತನಾಡುವುದಿಲ್ಲ. ಮಾಧ್ಯಮಗಳಲ್ಲಿ ನನ್ನ ಮಗ ಸಹ ಕಾರಿನಲ್ಲಿದ್ದ ಎಂದು ಬಿತ್ತರವಾಗುತ್ತಿದೆ. ಆದರೆ, ಈ ಬಗ್ಗೆ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ. ದಾಖಲಾಗಿರುವ ಎಫ್‍ಐಆರ್ ನಲ್ಲಿ ನನ್ನ ಮಗನ ಹೆಸರಿಲ್ಲ ಎಂದರ. ಆದರೆ ತಮ್ಮ ಮಗ ಎಲ್ಲಿದ್ದಾನೆ ಎಂಬ ಪ್ರಶ್ನೆಗೆ ಉತ್ತರಿಸಲು ಹಿಂದೇಟು ಹಾಕಿದರು. 

ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಈ ಕುರಿತು ಪ್ರತಿಕ್ರಿಯಿಸಿ, ಅಪಘಾತದಲ್ಲಿ ರವಿ ನಾಯಕ್ ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರಿನಲ್ಲಿ ಸಚಿವ ಆರ್ ಅಶೋಕ ಪುತ್ರ ಇದ್ದರೂ ಎಂಬುದು ಒಂದು ವದಂತಿ. ಅವರು ಕಾರಿನಲ್ಲಿ ಇರಲಿಲ್ಲ. ಅಪಘಾತ ನಡೆದ ದಿನ ಕಾರನ್ನು ರಾಹುಲ್ ಎಂಬಾತ ಚಲಾಯಿಸುತ್ತಿದ್ದು ಆತನನ್ನು ಬಂಧಿಸಲಾಗಿದೆ. ಅತಿಯಾದ ವೇಗದ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿರಬಹುದು ಎಂದರು.

ಕಾರು ಯಾರಿಗೆ ಸೇರಿದ್ದು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಎಫ್ ಐ ಆರ್ ನಲ್ಲಿ ಕಾರಿನ ಹೆಸರು ತಪ್ಪಾಗಿ ದಾಖಲಾಗಿದ್ದು, ಬೇಂಜ್ ಬದಲು ಆಡಿ ಕಾರು ಎಂದು ನಮೂದಾಗಿದೆ. ತಮ್ಮ ಮೇಲೆ ಯಾವುದೇ ರೀತಿಯ ಒತ್ತಡವಿಲ್ಲ. ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಮಾಡಲಾಗುವುದು ಎಂದರು.

ಫೆ.10ರಂದು ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಓರ್ವ ಪಾದಚಾರಿ ಹಾಗೂ ಕಾರಿನಲ್ಲಿದ್ದವನನ್ನು ಬಲಿ ಪಡೆದಿತ್ತು. ದುರ್ಗಾ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 50ರ ಸೇತುವೆ ಮೇಲಿನಿಂದ ವೇಗದಲ್ಲಿ ಬಂದ ಕಾರು ರಸ್ತೆ ಬದಿ ಚಹಾದ ಅಂಗಡಿ ಬಳಿ ನಿಂತಿದ್ದ ರವಿ ನಾಯಕ್(19) ಎಂಬ ಬಾಲಕನಿಗೆ ಕಾರು ಗುದ್ದಿ, ಸುಮಾರು 100 ಮೀಟರ್ ದೂರದವರೆಗೆ ರವಿ ಅವರನ್ನು ಕಾರು ತಳ್ಳಿಕೊಂಡು ಹೋಗಿತ್ತು. ಈ ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತೀಕೆರೆ ನಿವಾಸಿ ಸಚಿನ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೆಎ-05, ಎಂಡಬ್ಲ್ಯು 357 ನಂಬರಿನ ಬೆಂಜ್ ಕಾರು ಉತ್ತರಹಳ್ಳಿ ಬ್ರಾಂಚ್‍ನ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹೆಸರಿನಲ್ಲಿದೆ.

ಬೆಂಗಳೂರಿನ ಶಾರದಾಂಬ ನಗರ, ಜಾಲಹಳ್ಳಿಯ ರಾಹುಲ್ (29) ಎ1 ಈತ ಚಾಲನೆ ಮಾಡುತ್ತಿದ್ದಾಗ ಅಪಘಾತ ಸಂಭವಿಸಿರುವುದಾಗಿ ಪ್ರಕರಣ ದಾಖಲಾಗಿದೆ.