ಜಮ್ಮು, ಅ 4: ಜಮ್ಮ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಬಂಧಿಸಲಾಗಿದ್ದ ರಾಜಕೀಯ ನಾಯಕರನ್ನು ಒಬ್ಬೊಬ್ಬರನ್ನಾಗಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಸಲಹೆಗಾರ ಫಾರೂಖ್ ಖಾನ್ ತಿಳಿಸಿದ್ದಾರೆ. ಪ್ರತಿ ವ್ಯಕ್ತಿಯ ರಾಜಕೀಯ ಹಿನ್ನೆಲೆ ಪರಿಶೀಲನೆ ನಂತರ ಕ್ರಮ ಕೈಗೊಳ್ಳಲಾಗುತ್ತದೆ. ಅ 24 ರಂದು ಬ್ಲಾಕ್ ಅಭಿವೃದ್ಧಿ ಮಂಡಳಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆಗಸ್ಟ್ 5 ರಂದು ವಿಶೇಷ ಸ್ಥಾನಮಾನ ರದ್ದು ಮಾಡಿದ ನಂತರ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ 400ಕ್ಕೂ ಹೆಚ್ಚು ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಕೇಂದ್ರ ಸರ್ಕಾರದ ಈ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ನ್ಲ್ಲಿ 250ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ.