ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ

 ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ  Addiction-Free Day observance on the occasion of Dr. Mahanta Shivayogi's birth anniversary

ಲೋಕದರ್ಶನ ವರದಿ 

ಹಾವೇರಿ  01: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಎಫ್‌.ಎನ್‌. ಗಾಜಿಗೌಡ್ರ ಕರೆ ನೀಡಿದರು.  

ನಗರದ ಗಾಂಧಿ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಆರೋಗ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿವರ್ತನಾ ಮಹಿಳಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  

ಮಾದಕ ವಸ್ತುಗಳ ದುಶ್ಚಟಗಳನ್ನು ತ್ಯಜಿಸಿ ಆರೋಗ್ಯಕರ ಜೀವನ ನಡೆಸುವಂತೆ ಜಾಗೃತಿ ಮೂಡಿಸಿದ ಡಾ. ಮಹಾಂತ ಶಿವಯೋಗಿಗಳು ವ್ಯಸನಮುಕ್ತ ಸಮಾಜದ ಕನಸು ಕಂಡ ಮಹಾನ್ ವ್ಯಕ್ತಿಯಾಗಿದ್ದಾರೆ. ಅವರು ಜೋಳಿಗೆ ಹಿಡಿದು ಮನೆ ಮನೆಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು ಎಂದು ಹೇಳಿದರು.  

ವ್ಯಸನಗಳಿಂದ ಕುಟುಂಬ ಹಾಗೂ ಸಮಾಜದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯುವಜನರು ದುಶ್ಚಟಗಳಿಗೆ ಬಲಿಯಾಗದೆ ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಮಹಾನ್ ವ್ಯಕ್ತಿಗಳ ಜೀವನಾದರ್ಶಗಳನ್ನು ಅಳವಡಿಸಿಕೊಂಡು ಉತ್ತಮ ಮಾರ್ಗದಲ್ಲಿ ನಡೆಯಬೇಕು ಎಂದು ಸಲಹೆ ನೀಡಿದರು.  

ಪ್ರಸ್ತುತ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಬಾಲ್ಯದಿಂದಲೇ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣವು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ, ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.