ಮಹಿಳಾ ಶಿಕ್ಷಣದ ಬೆಳವಣಿಗೆಗೆ ಅಕ್ಕಮಹಾದೇವಿ ವಿವಿ ಮಹತ್ವದ ಕೊಡುಗೆ: ಬಸವರಾಜ ಹೊರಟ್ಟಿ
Akkamahadevi University has made a significant contribution to the growth of women's education: Basa
ಲೋಕದರ್ಶನ ವರದಿ
ವಿಜಯಪುರ 29 : ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳಾ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದು, ಮಹಿಳೆಯರ ಉನ್ನತ ಶಿಕ್ಷಣ ಮತ್ತು ಸಬಲೀಕರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನಶಕ್ತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದಶಮಾನೋತ್ಸವ ಕಟ್ಟಡ ಉದ್ಘಾಟನೆ ಹಾಗೂ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವು ಮಹಿಳಾ ಉನ್ನತ ಶಿಕ್ಷಣದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡುತ್ತಿದೆ. ವಿಶ್ವವಿದ್ಯಾಲಯದ ಶೈಕ್ಷಣಿಕ ವಾತಾವರಣ, ವಿದ್ಯಾರ್ಥಿನಿಯರ ಶಿಸ್ತು ಹಾಗೂ ಶೈಕ್ಷಣಿಕ ಸಾಧನೆ ಶ್ಲಾಘನೀಯವಾಗಿದ್ದು, ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿನಿಯರು ಇಲ್ಲಿ ಶಿಕ್ಷಣ ಪಡೆಯುವಂತಹ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಇನ್ನಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ವಸತಿ ಸೌಲಭ್ಯಗಳು ಹಾಗೂ ಶೈಕ್ಷಣಿಕ ಮೂಲಸೌಕರ್ಯಗಳನ್ನು ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಮಹಿಳೆಯರು ಸಣ್ಣ ಉದ್ಯಮಗಳ ಮೂಲಕವೂ ದೊಡ್ಡ ಮಟ್ಟದ ಯಶಸ್ಸು ಸಾಧಿಸಬಹುದು. "ನಮ್ಮಿಂದ ಏನೂ ಸಾಧ್ಯವಿಲ್ಲ" ಎಂಬ ಮನೋಭಾವವನ್ನು ತೊರೆದು ಆತ್ಮವಿಶ್ವಾಸದಿಂದ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯಬೇಕು. ಮಹಿಳೆಯರು ಅಡುಗೆ ಮನೆಗೆ ಮಾತ್ರ ಸೀಮಿತರಲ್ಲ, ನ್ಯಾಯಾಂಗ, ಪೊಲೀಸ್, ವೈದ್ಯಕೀಯ, ಶಿಕ್ಷಣ, ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆಯತ್ತ ಹೆಜ್ಜೆ ಇಡಬೇಕು ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು ಸಂಸ್ಥಾಪನಾ ಭಾಷಣ ಮಾಡಿದ ವಿಶ್ರಾಂತ ಕುಲಪತಿ ಪ್ರೊ.ಎಸ್.ವಿ. ಹಲಸೆ ಮಾತನಾಡಿ, ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ್ಯಾಧಾರಿತ ಹಾಗೂ ಉದ್ಯೋಗಮುಖಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಆರ್. ಪಾಟೀಲ ಮಾತನಾಡಿ, ಮಹಿಳಾ ಶಿಕ್ಷಣವು ಸಮಾಜದ ಅಭಿವೃದ್ಧಿಗೆ ಭದ್ರ ಅಡಿಪಾಯವಾಗಿದೆ. ವಿದ್ಯಾರ್ಥಿನಿಯರು ಪದವಿಗೆ ಸೀಮಿತರಾಗದೆ ಸಂಶೋಧನೆ, ವಿಜ್ಞಾನ, ತಂತ್ರಜ್ಞಾನ ಹಾಗೂ ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಗುರಿ ಹೊಂದಬೇಕು. ಉನ್ನತ ಶಿಕ್ಷಣವು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸ್ವಾವಲಂಬನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟದ ಶಿಕ್ಷಣ, ಆಧುನಿಕ ಸೌಲಭ್ಯಗಳು, ಸಂಶೋಧನೆಗೆ ಉತ್ತೇಜನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಾಗ ಮಾತ್ರ ಮಹಿಳಾ ಸಬಲೀಕರಣದ ಉದ್ದೇಶ ಸಾಕಾರವಾಗುತ್ತದೆ ಎಂದು ಹೇಳಿದರು.
ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ “ಮುಂದಿನ ದಿನಗಳಲ್ಲಿ ಮಹಿಳಾ ವಿಶ್ವವಿದ್ಯಾಲಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮತ್ತು ವಿವಿಧ ಸಂಘ ಸಂಸ್ಥೆಗಳಿಗೆ ಹಾಗೂ ಕಾರ್ೋರೇಟ್ ಸಂಸ್ಥೆಗಳಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ ಸುಮಾರು 250 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಗಳನ್ನು ಸಲ್ಲಿಸಿದ್ದೇವೆ. ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣ, ಮಹಿಳಾ ಸಂಗ್ರಹಾಲಯ, ಹೊಸ ಕಟ್ಟಡಗಳು, ಆಧುನಿಕ ಪ್ರಯೋಗಾಲಯಗಳು, ಸಂಶೋಧನಾ ಅನುದಾನಗಳು, ವಿದ್ಯಾರ್ಥಿವೇತನ ಯೋಜನೆಗಳು, ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಹಾಗೂ ವಿವಿಧ ಶೈಕ್ಷಣಿಕ ಮತ್ತು ಸಂಶೋಧನಾ ಯೋಜನೆಗಳಿಗೆ ಈ ಪ್ರಸ್ತಾವನೆಗಳು ಸಂಬಂಧಿಸಿವೆ. ಇವು ಮಂಜೂರಾದರೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ ಎಂಬ ವಿಶ್ವಾಸ ನನಗಿದೆ ಎಂದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ ಅರಣ್ಯ ಇಲಾಖೆ, ವೃಕ್ಷೋತ್ಥಾನ ಸಂಸ್ಥೆ, ಶಿವಗಿರಿ ಫೌಂಡೇಶನ್ ಹಾಗೂ ಇತರ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವವಿದ್ಯಾಲಯ ಆವರಣದಲ್ಲಿ ಐದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಆರಂಭಿಸಿದ್ದೇವೆ. ಹಸಿರು ಆವರಣ ನಿರ್ಮಿಸುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಸಂಕಲ್ಪವನ್ನು ಮಾಡಿಕೊಂಡಿದ್ದೇವೆ ಎಂದೂ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಸಿಂಡಿಕೇಟ್ ಸದಸ್ಯೆ ಮಲ್ಲಮ್ಮ ಯಾಳವಾರ, ಹಣಕಾಸು ಅಧಿಕಾರಿ ರಾಮಣ್ಣ ಎಸ್. ಅಥಣಿ, ವಿವಿಧ ನಿಕಾಯಗಳ ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕುಲಸಚಿವ ಶಂಕರಗೌಡ ಸೋಮನಾಳ ಸ್ವಾಗತಿಸಿ, ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಹಿರಿಯ ಪ್ರಾಧ್ಯಾಪಕ ಪ್ರೊ.ಮಹೇಶ್ ಚಿಂತಾಮಣಿ, ಪ್ರೊ.ರಾಜಕುಮಾರ್ ಮಾಲಿಪಾಟೀಲ್ ಹಾಗೂ ಪ್ರೊ.ಸಕ್ಪಾಲ್ ಹೂವಣ್ಣ ಅತಿಥಿಗಳನ್ನು ಪರಿಚಯಿಸಿದರು. ಪ್ರೊ.ಹನುಮಂತಯ್ಯ ಪೂಜಾರಿ ನಿರೂಪಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್. ಲಕ್ಕಣ್ಣವರ ವಂದಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 