150 ಕೋಟಿ ರೂ. ಆಮಿಷ ಆರೋಪ: ರಾಜ್ಯ ಸರ್ಕಾರ ಸಿಬಿಐಗೆ ವಹಿಸಲಿ

Allegation of baiting Rs.150 crore : Let the state government hand it over to the CBI

ಬೆಳಗಾವಿ 16: ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನ ವಹಿಸುವಂತೆ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರಿಗೆ ತಾನು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ಸಿಬಿಐ ತನಿಖೆಗೆ ವಹಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೋಮವಾರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.

ವಿಧಾನಸಭೆಯಲ್ಲಿ ತಮ್ಮ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ಆರೋಪದ ಬಗ್ಗೆ ಪ್ರಸ್ತಾಪಿಸಿದ ವಿಜಯೇಂದ್ರ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ಸಿದ್ದರಾಮಯ್ಯ ಸಚಿವ ಸಂಪುಟ ತಿರಸ್ಕರಿಸಿತು. ಸಿಎಂ ಅವರಿಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಇದೆ. ನಾನು ಸಿಎಂಗೆ ಸವಾಲ್ ಹಾಕುತ್ತೇನೆ, 150 ಕೋಟಿ ರೂ. ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ. ಜತೆಗೆ ಅನ್ವರ್ ಮಾಣಿಪ್ಪಾಡಿ ವರದಿಯ ತನಿಖೆಯನ್ನೂ ಸಿಬಿಐಗೆ ಕೊಡಲಿ ಎಂದು ವಿಜಯೇಂದ್ರ ಆಗ್ರಹಿಸಿದರು.

ಹಗರಣಗಳ ಸುಳಿಯಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಅವರು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿ ಕಾರಿದರು.