ನವದೆಹಲಿ, ಫೆ.4, ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ವಿರುದ್ಧ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ಧ ವಿರೋಧ ಪಕ್ಷಗಳ ಸದಸ್ಯರು ಧರಣಿ ನಡೆಸಿ ಗದ್ದಲವೆಬ್ಬಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಿದ ಪ್ರಸಂಗ ನಡೆಯಿತು.ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನಂತ್ ಕುಮಾರ್ ಅವರು, ಗಾಂಧೀಜಿ ನೇತೃತ್ವದ ಸ್ವಾತಂತ್ರ್ಯ ಚಳವಳಿಯನ್ನು ಟೀಕಿಸಿದ್ದು, ಇದು ಬ್ರಿಟಿಷರೊಂದಿಗೆ ಮಾಡಿಕೊಂಡ ಹೊಂದಾಣಿಕೆ ಎಂದು ಹೇಳಿದ್ದರು. ಇದಕ್ಕೆ ರಾಜಕೀಯ ವಲಯ ಸೇರಿದಂತೆ ಸಮಾಜದ ವಿವಿಧ ವಲಯಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಸದನ ಸಮಾವೇಶಗೊಳ್ಳುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಸಂತಾಪ ಸೂಚಕ ನಿರ್ಣಯ ಓದಿದರು. ಬಳಿಕ ವಿರೋಧ ಪಕ್ಷಗಳ ಸದಸ್ಯರು ಅನಂತ್ ಕುಮಾರ್ ಹೆಗಡೆ ವಿಷಯವನ್ನು ಪ್ರಸ್ತಾಪಿಸಿದರು.ಗದ್ದಲ ಹೆಚ್ಚಾದಾಗ ಸ್ಪೀಕರ್ ಅವರು ಕಲಾಪವನ್ನು ಮಧ್ಯಾಹ್ನ 12 ಗಂಟೆ ವರೆಗೆ ಮುಂದೂಡಿದರು. ಸೋಮವಾರ ಲೋಕಸಭೆಯ ಕಲಾಪ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಗದ್ದಲಕ್ಕೆ ಬಲಿಯಾಗಿತ್ತು. ಈ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವೇರ್ಪಡಿಸಿದ್ದರಿಂದ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು.