ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ‘ವಿಪ್ರ ಸ್ವ ಉದ್ಯಮ ನೇರ ಸಾಲ’ ಯೋಜನೆಗೆ ಆಗಸ್ಟ್‌ 31ರವರೆಗೆ ಅರ್ಜಿ ಆಹ್ವಾನ

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ‘ವಿಪ್ರ ಸ್ವ ಉದ್ಯಮ ನೇರ ಸಾಲ’ ಯೋಜನೆಗೆ ಆಗಸ್ಟ್‌ 31ರವರೆಗೆ ಅರ್ಜಿ ಆಹ್ವಾನ  Applications invited for the Brahmin Development Board’s ‘Vipra Self-Employment Direct Loan’ scheme

ಗದಗ, ಜು.28: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ‘ವಿಪ್ರ ಸ್ವ ಉದ್ಯಮ ನೇರ ಸಾಲ’ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ಆರ್ಥಿಕ ನೆರವು ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್‌ 31 ಕೊನೆಯ ದಿನವಾಗಿದೆ ಎಂದು ಮಂಡಳಿಯ ನಿರ್ದೇಶಕ ಗುರುರಾಜ ಬಳಗಾನೂರು ತಿಳಿಸಿದರು.  

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಹಾಗೂ ಹೈನುಗಾರಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗಗಳಿಗೆ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದರು.  

2025-26ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಮಂಡಳಿಗೆ ?25 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ ?20 ಕೋಟಿ ಈಗಾಗಲೇ ಸದ್ಬಳಕೆಯಾಗಿದೆ. ಈ ವರ್ಷವೂ ಯೋಜನೆಯ ಗುರಿ ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.  

ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಯೋಜನೆಯಡಿ ?15 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ವಾರ್ಷಿಕ ?1 ಲಕ್ಷವರೆಗೆ ಸಹಾಯಧನ ನೀಡುವ ಯೋಜನೆಯೂ ಇದೆ ಎಂದು ಮಾಹಿತಿ ನೀಡಿದರು.  

ಮಂಡಳಿಗೆ ಕನಿಷ್ಠ ?100 ಕೋಟಿ ಅನುದಾನ ನೀಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು. ಕಿತ್ತೂರು ಕರ್ನಾಟಕ ಭಾಗದ ಬ್ರಾಹ್ಮಣ ಸಮುದಾಯದ ಅರ್ಹರು ಯೋಜನೆಗಳ ಸದುಪಯೋಗ ಪಡೆಯುವಂತೆ ಕರೆ ನೀಡಿದರು.  

ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ವೆಂಕಟೇಶ್ ಕುಲಕರ್ಣಿ, ಅನಿಲ್ ತೆಂಬದಮನಿ, ಕೃಷ್ಣಜಿ ನಾಡಗೇರ, ನಾಗರಾಜ ಕುಲಕರ್ಣಿ, ಕಿರಣ್ ಪೂಜಾರ, ಮೇಘಾ ಮುದುಗಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.