ಬೆಂಗಳೂರು, ಏ.3,ಕೊರೊನಾ ವೈರಸ್ ಸೋಂಕು ತಡೆಗಟ್ಟಲು ದೇಶವನ್ನು ಲಾಕ್ ಡೌನ್ ಮಾಡಿದ್ದರೂ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ, ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ವಿಜಯನಗರದ 29 ವರ್ಷದ ಧನಂಜಯ್, ಆರ್ ಟಿ ನಗರದ ಸಂಜಯ್ (29) ಬಂಧಿತ ಆರೋಪಿಗಳು.ಬಂಧಿತರಿಂದ ವಿವಿಧ ಬಗೆಯ 100 ಮದ್ಯದ ಬಾಟಲ್ ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಬೆಲೆ 1,25,000 ರೂ. ಆಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.
ಗುರುವಾರ ಸಂಜೆ 4.30 ಗಂಟೆಗೆ ಆರ್ ಟಿ ನಗರದ ಮಹಬಾನ್ ಸ್ಟ್ರೀಟ್ ಆಲ್ವೈನ್ ವ್ಯೂ ನಲ್ಲಿ ಮದ್ಯದ ಬಾಟಲ್ ಅಕ್ರಮವಾಗಿ ದಾಸ್ತಾನು ಮಾಡಿಕೊಂಡು, ಸಾರ್ವಜನಿಕರಿಗೆ ಅಧಿಕ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು.ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದಾಗ 4000ರಿಂದ 5000 ರೂ.ಗೆ ಒಂದು ಬಾಟಲ್ ಮಾರಾಟ ಮಾಡುತ್ತಿದ್ದರು ಎಂದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.