ವಿಕಸಿತ ಭಾರತ ಗ್ಯಾರಂಟಿ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ

ವಿಕಸಿತ ಭಾರತ ಗ್ಯಾರಂಟಿ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ  Awareness about the Viksit Bharat Guarantee Scheme at the village level

ಲೋಕದರ್ಶನ ವರದಿ  

ಹಾವೇರಿ 04: ಕೇಂದ್ರ ಸರ್ಕಾರ ಜುಲೈ 1ರಿಂದ ಜಾರಿಗೆ ತಂದಿರುವ ವಿಕಸಿತ ಭಾರತ ಗ್ಯಾರಂಟಿ ಯೋಜನೆ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿಡಗೂರು ಗ್ರಾಮದಲ್ಲಿ ಆಯೋಜಿಸಲಾಯಿತು.  ಕಾರ್ಯಕ್ರಮದಲ್ಲಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೋಮಾನಂದ ಬಾಕರೆ, ರಾಜ್ಯದಲ್ಲಿ ಬರಗಾಲದ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ವಲಸೆ ಹೋಗುವುದನ್ನು ತಡೆಯಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಜವಾಬ್ದಾರಿ ಪಂಚಾಯಿತಿಗಳ ಮೇಲಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.  

ತಾಲೂಕು ಪಂಚಾಯಿತಿ ಐಇಸಿ ಸಂಯೋಜಕ ಗೀರೀಶ್ ಬೆನ್ನೂರು ಮಾತನಾಡಿ, ಯೋಜನೆಯ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ತಲುಪಿಸುವ ಉದ್ದೇಶದಿಂದ ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಕುಟುಂಬಗಳಿಗೆ ವರ್ಷಕ್ಕೆ 100 ದಿನಗಳ ಬದಲಿಗೆ 125 ದಿನಗಳ ಉದ್ಯೋಗ ಖಾತರಿ ನೀಡುವ ಮೂಲಕ ಆರ್ಥಿಕ ಭದ್ರತೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ಹೇಳಿದರು.  

ತಾಲೂಕು ಪಂಚಾಯಿತಿ ತಾಂತ್ರಿಕ ಸಂಯೋಜಕ ಮಹಾಗುಂಡೇಶ್ವರ ಮುಗುಳಿ ಮಾತನಾಡಿ, ಯೋಜನೆಯಡಿ ದಿನಕ್ಕೆ ?382 ಕೂಲಿ ನೀಡಲಾಗುತ್ತಿದ್ದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 60:40 ವೆಚ್ಚ ಹಂಚಿಕೆ ಅನುಪಾತದಲ್ಲಿ ಜಾರಿಯಲ್ಲಿರುವ ಈ ಯೋಜನೆ ಕೇವಲ ಉದ್ಯೋಗ ನೀಡುವುದಕ್ಕಷ್ಟೇ ಸೀಮಿತವಾಗದೆ, ಜಲ ಸಂರಕ್ಷಣೆ, ಗ್ರಾಮೀಣ ರಸ್ತೆ ನಿರ್ಮಾಣ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಅಗತ್ಯವಾದ ಶಾಶ್ವತ ಆಸ್ತಿಗಳ ನಿರ್ಮಾಣಕ್ಕೂ ಆದ್ಯತೆ ನೀಡುತ್ತಿದೆ ಎಂದು ತಿಳಿಸಿದರು.  ಕಾರ್ಯಕ್ರಮದಲ್ಲಿ ಕಾಯಕ್ ಮಿತ್ರರು, ಕೂಲಿ ಕಾರ್ಮಿಕರು, ಮೇಟಿಗಳು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.