ಮಡಿಕೇರಿ, ಫೆ.6 ರಾಜ್ಯದಲ್ಲಿ ಕೊರೊನಾ ಸೋಂಕು ಸಂಬಂಧಿಸಿದಂತೆ ಈಗಾಗಲೇ 74 ಶಂಕಿತರ ರಕ್ತ ಪರೀಕ್ಷೆ ಕೈಗೊಳ್ಳಲಾಗಿದ್ದು ಇವರಲ್ಲಿ ವೈರಾಣುಗಳಿಲ್ಲ ಎಂದು ಸಾಬೀತಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಡಿಕೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸಂಬಂಧಿಸಿದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಕೊರೊನಾ ಸಂಬಂಧಿಸಿದ ಪ್ರಕರಣಗಳಿಗೆ ಮೀಸಲಿಡಲಾಗಿದೆ. ರಾಜ್ಯದ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಂದರುಗಳೂ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಕೊರೊನಾ ವೈರಾಣು ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗಿದ್ದು, ಔಷಧಿ ಸೇರಿದಂತೆ ಯಾವುದೇ ಮೂಲಸೌಕರ್ಯಗಳ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ತಪಾಸಣೆ ನಡೆಸುತ್ತಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಈಗಾಗಲೇ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸಂಬಂಧಿತ ಜಾಗೃತಿ ಮೂಡಿಸಲು 15 ಎಲ್‌ಇಡಿ ವಾಹನಗಳನ್ನು ರವಾನಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಮತ್ತೆ 15 ವಾಹನಗಳನ್ನು ಜನಜಾಗೃತಿಗಾಗಿ ರವಾನಿಸಲಾಗುತ್ತದೆ ಎಂದು ಶ್ರೀರಾಮುಲು ತಿಳಿಸಿದರು.