ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ

ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ Awareness program against drug abuse and trafficking

 ಧಾರವಾಡ 29: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಧಾರವಾಡದ ಕಿಟ್ಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಜಾಗೃತಿ ದಿನದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಜೂನ್ 29ರಂದು ಆಯೋಜಿಸಲಾಯಿತು.  

ಕಾರ್ಯಕ್ರಮವನ್ನು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್‌. ವಿ. ವಿಜಯ ಅವರು ಉದ್ಘಾಟಿಸಿ ಮಾತನಾಡಿದರು. ಅವರು ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಣಿಕೆ ಕಾನೂನುಬದ್ಧ ಅಪರಾಧವಾಗಿದ್ದು, ಇದು ಸಮಾಜದ ಆರೋಗ್ಯ ಹಾಗೂ ಯುವಜನರ ಭವಿಷ್ಯಕ್ಕೆ ಗಂಭೀರ ಹಾನಿ ಉಂಟುಮಾಡುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಹಾಗೂ ನಾಗರಿಕರು ಇಂತಹ ದುಶ್ಚಟಗಳಿಂದ ದೂರವಿದ್ದು ಜಾಗೃತರಾಗಿರಬೇಕು ಎಂದು ಅವರು ಕರೆ ನೀಡಿದರು.  

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಡಾ. ತೇಜಸ್ವಿನಿ ನಾರಾಯಣಕರ ಅವರು ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣವು ಎಲ್ಲರ ಜವಾಬ್ದಾರಿ ಎಂದು ಹೇಳಿದರು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಸರಿಯಾದ ಅರಿವು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಅವರು ಒತ್ತಿ ಹೇಳಿದರು.  ಕಿಟ್ಟೆಲ್ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಸವಿತಾ ಎಸ್‌. ನಂದಿಕೇಶ್ವರ ಅವರು ಮಾತನಾಡಿ, ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ಯುವಜನತೆ ದೂರವಿರಬೇಕು ಎಂದು ಹೇಳಿದರು. ವಿದ್ಯಾರ್ಥಿಗಳ ಮಾನಸಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಇಂತಹ ಜಾಗೃತಿ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.  

ಕಾರ್ಯಕ್ರಮದಲ್ಲಿ ಡಾ. ಮೋಹನ ಕುಮಾರ ಥಂಬದ, ಡಾ. ಅಶೋಕ ಕೋರಿ ಸೇರಿದಂತೆ ಅನೇಕ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು. ಆನಂದ ವಿಜಯಕುಮಾರ ಅವರು ಪ್ರಾರ್ಥನೆ ಸಲ್ಲಿಸಿದರು. ಜಾವೇದ್ ಮೂಡಿ ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಲಕ್ಷ್ಮೀ ಚಾಯಾ ವಂದನಾರೆ​‍್ಣ ಸಲ್ಲಿಸಿದರು.  ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.