ವಿಜಯಪುರ 18: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಶಕ್ತಿ ಪ್ರದರ್ಶನ ಮಾಡಿದ್ದು, ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ವಿಜಯಪುರದಲ್ಲಿ ಪಕ್ಷದ ಜನಕ್ರೋಶ ಯಾತ್ರೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಣವನ್ನು ಬೇರೆಡೆಗೆ ತಿರುಗಿಸಿದ್ದು, ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವತ್ತ ಗಮನಹರಿಸುತ್ತಿದೆ ಎಂದು ಕಿಡಿಕಾರಿದರು.
ಜನರ ಆಕ್ರೋಶ ವ್ಯಕ್ತವಾಗುವ ಭಯದಿಂದ ಕಾಂಗ್ರೆಸ್ ನಾಯಕರು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡದೆ ಬೆಂಗಳೂರಿನಲ್ಲಿಯೇ ಉಳಿದುಕೊಳ್ಳುತ್ತಿದ್ದಾರೆಂದು ಹೇಳಿದರು.
ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಅಧಿಕಾರಾವಧಿಯಲ್ಲಿ ಬಡವರು, ದಲಿತರು ಮತ್ತು ರೈತರಿಗೆ ಸಿಎಂ ನೀಡಿದ ಕೊಡುಗೆಯನ್ನು ಪ್ರಶ್ನಿಸಿದರು.
ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಎರಡು ವರ್ಷಗಳಾದರೂ ಬಿಡಿಗಾಸೂ ಬಿಡುಗಡೆ ಮಾಡಿಲ್ಲ. ವಿವಿಧ ವಸ್ತುಗಳ ಬೆಲೆ ಏರಿಸುವ ಮೂಲಕ ಒಂದು ಕೈಯಲ್ಲಿ ನೀಡಿ, ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದ್ದಾರೆ. ಬಡವರ, ರೈತರ ಮರಣ ಶಾಸಕ ಬರೆಯುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಜನವಿರೋಧಿ, ರೈತವಿರೋಧಿ ಮತ್ತು ಹಿಂದೂ ವಿರೋಧಿ ಸರ್ಕಾರವಾಗಿದೆ ಎಂದು ಆರೋಪಿಸಿದರು. ಅಲ್ಲದೆ, 50 ಕ್ಕೂ ಹೆಚ್ಚು ಸಾರ್ವಜನಿಕ ಸೇವೆಗಳ ಬೆಲೆ ಏರಿಕೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾದ 38,000 ಕೋಟಿ ರೂ.ಗಳ ದುರುಪಯೋಗಪಡಿಸಿಕೊಂಡಿದ್ದಾರೆಂದೂ ಆರೋಪಿಸಿದರು. ಅಲ್ಲದೆ, "ಅಲ್ಪಸಂಖ್ಯಾತರ ಹೆಚ್ಚುತ್ತಿರುವ ತುಷ್ಟೀಕರಣ"ವನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ್, ಗೋವಿಂದ್ ಕಾರಜೋಳ ಸೇರಿದಂತೆ ಹಲವಾರು ಪ್ರಮುಖ ನಾಯಕರು, ಹಾಲಿ ಮತ್ತು ಮಾಜಿ ಶಾಸಕರು, ಬಿಜೆಪಿ ನಾಯಕರು ಹಾಜರಿದ್ದರು.
ಇದೇ ಸಂದರ್ಭದಲ್ಲಿ ಉಚ್ಚಾಟನೇ ಕುರಿತು ಮಾತನಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಿದ್ದರಿಂದ ಪಕ್ಷಕ್ಕೆ ಲಾಭವಾಗಿದೆ ಎಂದು ಯಾವತ್ತಿಗೂ ಹೇಳುವುದಿಲ್ಲ. ಆದರೆ, ಪಕ್ಷ ಮತ್ತಷ್ಟು ಬಲಿಷ್ಛವಾಗಿದೆ. ಅವರ ಉಚ್ಚಾಟನೆಯಿಂದ ಪಕ್ಷಕ್ಕೆ ಯಾವುದೇ ಪ್ರಯೋಜನವಾಗಿಲ್ಲವಾದರೂ, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಪಕ್ಷದ ನಾಯಕರು ಒಂದಾಗುತ್ತಿದ್ದಾರೆಂದು ಹೇಳಿದರು.