ನವದೆಹಲಿ, ನ 12 : ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಮಧ್ಯಾಹ್ನ ಬ್ರೆಜಿಲಿಯಾಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಮೋದಿ ಅವರು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸೇರಿದಂತೆ ಬ್ರಿಕ್ಸ್ ರಾಷ್ಟ್ರಗಳ ನಾಯಕರೊಂದಿಗೆ ವ್ಯಾಪಾರ, ಬಂಡವಾಳ ಹೂಡಿಕೆ ಕುರಿತಂತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿರುವುದನ್ನು ಮನಗಂಡು ಅವುಗಳಿಗೆ ಪರಿಹಾರ ಸೂಚಿಸುವುದು ಮತ್ತು ಬ್ರಿಕ್ಸ್ ರಾಷ್ಟ್ರಗಳ ನಡುವೆ ವ್ಯಾಪಾರ, ಬಂಡವಾಳ ಹೂಡಿಕೆಯನ್ನು ಪ್ರೋತ್ಸಾಹ ಮಾಡುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ಭಾರತದಲ್ಲಿ ಬಂಡವಾಳ ಹೂಡಲು ಉತ್ತಮ ಅವಕಾಶ ನಿರ್ಮಾಣ ಮಾಡಲಾಗಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ಮನವಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.