ಲಖ್ನೋ, ಏಪ್ರಿಲ್ 11,ದೇಶದಲ್ಲಿ ಹೆಚ್ಚುತ್ತಿರುವ ಕೊವಿದ್-19 ಪ್ರಕರಣಗಳ ಹಿನ್ನೆಲೆಯಲ್ಲಿ ಘೋಷಿಸಲಾಗಿರುವ ಲಾಕ್‌ಡೌನ್ ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದರೆ, ಅದನ್ನು ತಮ್ಮ ಪಕ್ಷ ಸ್ವಾಗತಿಸುತ್ತದೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಶನಿವಾರ ಹೇಳಿದ್ದಾರೆ.ಕೊರೊನಾವೈರಸ್‌ನಿಂದ ಉದ್ಭವವಾಗಿರುವ ಸವಾಲುಗಳನ್ನು ಎದುರಿಸುತ್ತಿರುವ ದೇಶದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಲಾಕ್‌ಡೌನ್ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಸರ್ಕಾರದ ಇಂತಹ ಎಲ್ಲ ನಿರ್ಧಾರಗಳಿಗೆ ಬಿಎಸ್‍ಪಿ ಬೆಂಬಲಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.
ಪ್ರತಿ ಹಂತದಲ್ಲೂ ಕೂಲಂಕಷವಾಗಿ ಪರಿಶೀಲಿಸಿದ ನಂತರ ಮತ್ತು ಬಹು ವಿಸ್ತಾರದ ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸದ್ಯ ಜಾರಿಯಲ್ಲಿರುವ 21 ದಿನಗಳ ರಾಷ್ಟ್ರವ್ಯಾಪಿ ಲಾಕ್‍ಡೌನ್ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದರೆ ಬಿಎಸ್‍ಪಿ ಅದನ್ನು ಸ್ವಾಗತಿಸುತ್ತದೆ ಎಂದು ಮಾಯಾವತಿ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಬಿಕ್ಕಟ್ಟಿನ ಈ ಸಮಯದಲ್ಲಿ ಜಾತಿ, ಧರ್ಮ ಮತ್ತು ಪಕ್ಷ ರಾಜಕಾರಣವನ್ನು ಮೀರಿ ಬಡ ಜನರು, ದುರ್ಬಲ ವರ್ಗದವರು, ಕಾರ್ಮಿಕರು ಮತ್ತು ರೈತರ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಳ್ಳಬೇಕೆಂದು ಮಾಯಾವತಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.ಕೊರೊನಾವೈರಸ್ ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ವೈದ್ಯರು, ಶುಶ್ರೂಷಕಿಯರು, ಸ್ವಚ್ಛತಾ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗೆ ಹಾಗೂ ಪರೋಕ್ಷವಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲರಿಗೂ ಸುರಕ್ಷತೆ ಮತ್ತು ಕುಟುಂಬ ರಕ್ಷಣೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧವಾಗಿರಬೇಕು ಎಂದು ಮಾಯಾವತಿ ಹೇಳಿದ್ದಾರೆ.