ಬೆಂಗಳೂರು, ಫೆ 13, ರಾಜ್ಯದ ಖಾಸಗಿ, ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 180 ರೌಡಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನಗರದಲ್ಲಿ ಯಾವುದೇ ಗಲಭೆಗಳಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಅವರು ಕಾವೇರಿ ಗಲಭೆ ಮತ್ತು ಇತರ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ಬೆಂಗಳೂರು ಉತ್ತರ ವಿಭಾಗದ 180 ರೌಡಿಶೀಟರ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಡೆಯುವ ಬಂದ್ ವೇಳೆ ಈ ಅಸಾಮಿಗಳು ಅಹಿತಕರ ಘಟನೆ ನಡೆಸುವ ಮಾಹಿತಿ ಇದ್ದುದರಿಂದ ಪೂರ್ವ ಯೋಜಿತವಾಗಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಅವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಇಂದು ಮುಂಜಾನೆಯಿಂದ ಪೊಲೀಸರು ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತಿನಲ್ಲಿದ್ದುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ.