ಬೆಂಗಳೂರು, ಜೂ 28: ಕೋವಿಡ್-19 ನಿಯಂತ್ರಣದ ಕ್ರಮ ಹಿನ್ನೆಲೆಯಲ್ಲಿ ರಾಜ್ಯದ ಹೈಕೋರ್ಟ್ ಮತ್ತು ಜಿಲ್ಲಾ ನ್ಯಾಯಾಲಯಗಳಿಗೆ ಸಾರ್ವಜನಿಕರ ಪ್ರವೇಶದ ನಿರ್ಬಂಧವನ್ನು ಮುಂದುವರಿಸಿ ಆದೇಶ ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಗಳ ಕಾರ್ಯ ಕಲಾಪಕ್ಕೆ ಸಂಬಂಧಿಸಿದ ಮಾರ್ಗಸೂಚಿ ಪರಿಷ್ಕರಿಸಿ ರಿಜಿಸ್ಟ್ರಾರ್ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಅಧಿಸೂಚನೆ ಪ್ರಕಟಿಸಿದ್ದಾರೆ. ನ್ಯಾಯಾಲಯಗಳಿಗೆ ವಕೀಲರು, ಸಿಬ್ಬಂದಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸಿಬ್ಬಂದಿ, ವಕೀಲರಿಗೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.