ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಬರಾಕ್ ಒಬಾಮಾ ಅವರಿಗೆ ಆಹ್ವಾನ
ಹಾವೇರಿ: ಬೆಳಗಾವಿಯಲ್ಲಿ ನಡೆಯಲಿರುವ ವಿಧಾನ ಮಂಡಲ ಜಂಟಿ ಅಧಿವೇಶನ ಮತ್ತು ಮಹಾತ್ಮ ಗಾಂಧಿಯವರ ಬೆಳಗಾವಿ ಭೇಟಿಯ ಶತಮಾನೋತ್ಸವ ಆಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಿದ್ದಾರೆ.
ಮಹಾತ್ಮಾ ಗಾಂಧಿಯವರು 1924 ರಲ್ಲಿ ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ 39 ನೇ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಅವರು ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ ಇದಾಗಿತ್ತು.
1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಒಬಾಮ ಅವರಿಗೆ ಪತ್ರ ಬರೆದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಅವರು ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡಿ, ವಿಸ್ತೃತವಾಗಿ ಚರ್ಚಿಸಿದ ಬಳಿಕ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲಾಗುವುದು. ಅಕ್ಟೋಬರ್ 2 ರಿಂದ ಒಂದು ವರ್ಷ ಕಾಲ ಶತಮಾನೋತ್ಸವ ವರ್ಷಾಚರಣೆ ನಡೆಯಲಿದೆ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹತ್ವ ಪಡೆಯಲು ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ಹಾಗೂ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಕರೆಸಲು ಉದ್ದೇಶಿಸಲಾಗಿದೆ. ಗಾಂಧೀಜಿಯ ಕುರಿತು ವಿಶೇಷ ಅಭಿಮಾನ ಹೊಂದಿರುವ ಒಬಾಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದರು.