ಬಸವರಾಜ ರೆಡ್ಡಿ ಆತ್ಮಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬಸವರಾಜ ರೆಡ್ಡಿ ಆತ್ಮಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ  Basavaraja Reddy suicide case: Demand for action against the accused


ಗದಗ ಆ.22: ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ 5ನೇ ವಾರ್ಡ್‌ ನಿವಾಸಿ ಬಸವರಾಜ ರೆಡ್ಡಿ ಅವರು ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಚಿಕಿತ್ಸೆ ಫಲಕಾರಿಯಾಗದೆ ಆ.16ರಂದು ಮೃತಪಟ್ಟಿದ್ದಾರೆ ಎಂದು ಅಖಿಲ ಕರ್ನಾಟಕ ರೆಡ್ಡಿ ಮಹಾಸಭಾ ರಾಜ್ಯ ಸಮಿತಿ ಗೌರವಾಧ್ಯಕ್ಷ ಬಸವರಡ್ಡಿ ಗೂರೂಜಿ ಆರೋಪಿಸಿದರು.  

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬಸವರಾಜ ರೆಡ್ಡಿ ಮತ್ತು ಅವರ ಕುಟುಂಬದವರಿಗೆ ಕೆಲವರು ನಿರಂತರವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದರಿಂದ ಈ ಘಟನೆ ನಡೆದಿದೆ ಎಂದು ದೂರಿದರು. ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.  

ಕನಕಗಿರಿ ಪೊಲೀಸ್ ಠಾಣೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಆರೋಪಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿದರು.  

ಮೃತರ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕು. ಮೃತರ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸಬೇಕು, ಕುಟುಂಬಕ್ಕೆ ಸಂಬಂಧಿಸಿದ ನಿವೇಶನಗಳಿಗೆ ಹಕ್ಕುಪತ್ರ ನೀಡಬೇಕು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದರು.  

ಬಸವರಾಜ ರೆಡ್ಡಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದವರು ಈ ಹಿಂದೆ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಹಲವು ಪ್ರಕರಣಗಳಿವೆ ಎಂದು ಆರೋಪಿಸಿದ ಅವರು, ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.  

ಕನಕಗಿರಿ ಪೊಲೀಸ್ ಠಾಣೆ ಹಾಗೂ ಸ್ಥಳೀಯ ಪಟ್ಟಣ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಅಲ್ಲದೆ, ಕ್ರಿಮಿನಾಶಕ ಮಾರಾಟ ಮಾಡುತ್ತಿದ್ದ ಕಂಪನಿ ಹಾಗೂ ಲಲಿತಾ ಟ್ರೇಡ್ ಸಂಸ್ಥೆಯನ್ನು ಕನಕಗಿರಿಯಲ್ಲಿ ಶಾಶ್ವತವಾಗಿ ಬಂದ್ ಮಾಡಿಸಬೇಕು ಎಂದು ಒತ್ತಾಯಿಸಿದರು.  ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ರೆಡ್ಡಿ ಮಹಾಸಭಾ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷಚಂದ್ರ ದಾನರಡ್ಡಿ, ರಮೇಶ್ ಪಾಟೀಲ್ ಉಪಸ್ಥಿತರಿದ್ದರು.