ಬೆಳಗಾವಿ 19: ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಸೂಕ್ತ ಪ್ರಾತಿನಿಧ್ಯವನ್ನು ಪಡೆಯದೇ ಇರುವ 49 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯ ಗಳಿಗೆ ಶೇ 3ರಷ್ಟು ಒಳಮೀಸಲಾತಿ ಕಲ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾದ ವತಿಯಿಂದ ನಡೆದ ಸುವರ್ಣ ಸೌಧ ಚಲೋ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿದೆ.
ನಿನ್ನೆಯ ದಿನ ರಾಜ್ಯದ ಎಲ್ಲ 49 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಜನರು ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಿ ತಮ್ಮ ಹಕ್ಕೊತ್ತಾಯ ಮಂಡಿಸಿದಾಗ ಅಬಕಾರಿ ಸಚಿವ ಆರಿ್ಬ.ತಿಮ್ಮಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸ್ಥಳಕ್ಕೆ ಆಗಮಿಸಿ ಬೇಡಿಕೆ ಈಡೇರಿಕೆಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಶೀಘ್ರವೇ ನಿಮ್ಮೊಂದಿಗೆ ಬೆಂಗಳೂರಿನ ವಿಧಾನಸೌಧದಲ್ಲಿ ಸಭೆ ಕರೆದು ಚರ್ಚಿಸಲಿದ್ದಾರೆ ಎಂದರು. ಅಲೆಮಾರಿಗಳ ಮುಂದಿನ ಪೀಳಿಗೆಯ ಸ್ವಾಭಿಮಾನ, ಗೌರವ, ಘನತೆ ಮತ್ತು ನೆಮ್ಮದಿಯ ಬದುಕಿಗಾಗಿ "ಪರಿಶಿಷ್ಟ ಜಾತಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿ ಪರಿಶಿಷ್ಟ ಜಾತಿ 49 ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟದ ಎಲ್ಲ ಪದಾಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆ ಈಡೇರಿಸಲಿದ್ದಾರೆ ಎಂದು ಸಚಿವರು ಭರವಸೆ ನೀಡಿದರು.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಅವರೂ ಕೂಡ ಸ್ಥಳಕ್ಕೆ ಆಗಮಿಸಿ ನಿಮ್ಮ ಹೋರಾಟ ಸೂಕ್ತವಾಗಿದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮಟ್ಟದಲ್ಲಿ ನಾವೂ ಕೂಡ ಧ್ವನಿ ಎತ್ತುತ್ತೇವೆ. ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳು ಮುಂದಿನ ಸಂಪುಟ ಸಭೆಯಲ್ಲಿ ಈ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಭರವಸೆ ನೀಡಿದರು. ಹೆಚ್ಚಿನ ಜನಸಂಖ್ಯೆ ಹಾಗೂ ಪ್ರಬಲ ಅಲೆಮಾರಿ ಸಮುದಾಯಗಳಾದ ಕೊರಮ ಮತ್ತು ಕೊರಚ ಸಮುದಾಯಗಳನ್ನು ಹಾಲಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಬೇರಿ್ಡಸಿ, 49 ಸೂಕ್ಷ್ಮ ಮತ್ತು 63 ಸೂಕ್ಷ್ಮ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಒದಗಿಸಬೇಕೆಂದು ಹೋರಾಟಗಾರರು ಸಚಿವರು ಮತ್ತು ಶಾಸಕದ್ವಯರಲ್ಲಿ ಮನವಿ ಮಾಡಿದರು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳಿಗೆ ಅಲೆಮಾರಿ ಆಯೋಗವನ್ನು ಶೀಘ್ರವಾಗಿ ಸ್ಥಾಪಿಸಬೇಕು. ರಾಜ್ಯದ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಅಲೆಮಾರಿ ಬುಡಕಟ್ಟು ಅಧ್ಯಯನ ಕೇಂದ್ರ ತೆರೆಯಬೇಕು. ಹಿಂದಿನ ಸರ್ಕಾರ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಲೆಮಾರಿಗಳ ಮನೆ ನಿರ್ಮಾಣಕ್ಕೆ ಹೆಚ್ಚುವರಿಯಾಗಿ ಅನುದಾನ ನೀಡಿ ನಂತರ ವಾಪಸ್ ಪಡೆದ 300 ಕೋಟಿ ರೂ. ಹಣವನ್ನು ಪುನಃ ತಕ್ಷಣ ಬಿಡುಗಡೆ ಮಾಡಬೇಕು. ವಿಧಾನ ಪರಿಷತ್ತಿಗೆ ನಡೆಯುವ ಆಯ್ಕೆಗಳಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯದಿಂದ ಒಬ್ಬ ವ್ಯಕ್ತಿಯನ್ನು ಸದಸ್ಯರಾಗಿ ಆಯ್ಕೆ ಮಾಡುವುದನ್ನು ಕಡ್ಡಾಯಗೊಳಿಸಬೇಕೆಂದು ಅಲೆಮಾರಿ ಸಮುದಾಯಗಳ ಮುಖಂಡರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸರ್ವೋಚ್ಚ ನ್ಯಾಯಾಲಯವು ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಹಿಂದುಳಿದಿರುವ ಸಮುದಾಯಗಳಿಗೆ ಮೊದಲ ಆದ್ಯತೆ ಮತ್ತು ಪ್ರಾಶಸ್ತ್ಯ ಕಲ್ಪಿಸಬೇಕೆಂದು ತೀರ್ಿನಲ್ಲಿ ಆದೇಶವಾಗಿದೆ. ಇದರ ಅನ್ವಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಬರುವ 49 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಅತ್ಯಂತ ಹಿಂದುಳಿದಿರುವುದನ್ನು ಪರಿಗಣಿಸಿ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಇದೇ ವೇಳೆ ಸಾವಿರಾರು ಸಂಖ್ಯೆಗೂ ಅಧಿಕ ಅಲೆಮಾರಿಗಳು ಅವರ ಸಾಂಸ್ಕೃತಿಕ ವೇಷ ಭೂಷಣಗಳೊಂದಿಗೆ ಬೆಳಗಾವಿಯ ಸುವರ್ಣ ಸೌಧದ ಮುಂದೆ ಕಂಡು ಬಂದರು. ಬುಡಗ ಜಂಗಮ ಸಮುದಾಯದ ರಾಜ್ಯಾಧ್ಯಕ್ಷ ಸಣ್ಣ ಮಾರೆಪ್ಪ, ಎಸ್.ಸಿ., ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯಾಧ್ಯಕ್ಷ ಕೆ.ವೀರೇಶ್, ಗೋಸಂಗಿ ಸಮುದಾಯದ ರಾಜ್ಯಾಧ್ಯಕ್ಷ ಚಾವಡಿ ಲೋಕೇಶ್, ದಕ್ಕಲಿಗ ಸಮುದಾಯದ ರಾಜ್ಯಾಧ್ಯಕ್ಷ ಶಾಂತರಾಜು, ದೊಂಬರ ಸಮುದಾಯದ ರಾಜ್ಯಾಧ್ಯಕ್ಷ ಚಿನ್ನು, ಸಿಳ್ಳೆಕ್ಯಾತ ಸಮುದಾಯದ ರಾಜ್ಯಾಧ್ಯಕ್ಷ ಶ್ರೀನಿವಾಸ್, ಹಂಡಿಜೋಗಿ ಸಮುದಾಯದ ರಾಜ್ಯಾಧ್ಯಕ್ಷ ರಾಜೇಂದ್ರ, ಘಂಟಿ ಚೋರ್ ಸಮುದಾಯದ ರಾಜ್ಯಾಧ್ಯಕ್ಷ ಮೋಹನ್ ಹೊಸೂರ್, ಮಾಂಗಾರುಡಿ ಸಮುದಾಯದ ರಾಜ್ಯಾಧ್ಯಕ್ಷ ಅನಿಲ್ ಕಾಂಬಳೆ ಮತ್ತು ಕರ್ನಾಟಕ ರಾಜ್ಯ ಎಸ್.ಸಿ., ಎಸ್.ಟಿ., ಅಲೆಮಾರಿ ಬುಡಕಟ್ಟು ಮಹಾಸಭಾದ ಜಿಲ್ಲಾಧ್ಯಕ್ಷ ಶಿವಕುಮಾರ್ ವೈ. ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಗಳ ಸಮುದಾಯಗಳ ಮುಖಂಡರು ಇದ್ದರು.