ಬೆಳಗಾವಿ ಸುವರ್ಣ ವಿಧಾನಸೌಧ ಡಿ.11 (ಕ.ವಾ.): -
Belgaum Suvarna Vidhana Soudha D.11 (K.V.): -
ಲೋಕದರ್ಶನ ವರದಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11 (ಕ.ವಾ.): -
ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‌ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ. ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ. ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‌ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ. ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.
ವಿವಿಧ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದ್ದ ಇಲಾಖೆಯ ವೈದ್ಯರು, ಆಹಾರ ಗುಣಮಟ್ಟ ಸುರಕ್ಷತಾ ಅಧಿಕಾರಿಗಳ ನಿಯೋಜನೆಯನ್ನು ರದ್ದುಗೊಳಿಸಿ, ಇಲಾಖೆಗೆ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗಿದ್ದು, ಇಲಾಖೆಗೆ ಅಗತ್ಯ ಇರುವ ಕಡೆಗಳಲ್ಲಿ ಇವರನ್ನು ನೇಮಕ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ತಾಯಿ, ಶಿಶು ಮರಣ ತಪ್ಪಿಸಲು ಕ್ರಮ
ತಾಲ್ಲೂಕು ಆಸ್ಪತ್ರೆಗಳಲ್ಲಿ 24*7 ಆರೋಗ್ಯ ಸೇವೆಗೆ ವ್ಯವಸ್ಥೆ- ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11 (ಕ.ವಾ.):
ತಾಯಿ ಹಾಗೂ ಶಿಶು ಮರಣ ಪ್ರಮಾಣವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ 02 ಸ್ತ್ರೀರೋಗ ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ತಜ್ಞ ವೈದ್ಯರನ್ನು ನೇಮಿಸಿ, ದಿನದ 24 ಗಂಟೆಯೂ ಸಾರ್ವಜನಿಕರಿಗೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದರಿಂದಾಗಿ ದಿನದ ಯಾವುದೇ ಸಮಯದಲ್ಲಿಯೇ ಹೆರಿಗೆ ಸೌಲಭ್ಯ, ನವಜಾತ ಶಿಶುಗಳ ಆರೈಕೆ ಸೇರಿದಂತೆ ಗುಣಮಟ್ಟದ ಆರೋಗ್ಯ ಸೇವೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. ಬಾಣಂತಿ, ಶಿಶು ಮರಣ ಪ್ರಕರಣಗಳನ್ನು ತಡೆಗಟ್ಟಲು ಇದು ಪರಿಣಾಮಕಾರಿ ವ್ಯವಸ್ಥೆಯಾಗಲಿದೆ, ಅಲ್ಲದೆ ಹೆರಿಗೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿಗೆ ಜಿಲ್ಲಾ ಆಸ್ಪತ್ರೆಗೆ ತೆರಳುವ ಪ್ರಕರಣಗಳಿಗೂ ಕಡಿವಾಣ ಬೀಳುತ್ತದೆ ಎಂದರು.
ಸಮುದಾಯ ಆರೋಗ್ಯ ಕೇಂದ್ರಗಳೂ ಕೂಡ 24 ಗಂಟೆ ಆರೋಗ್ಯ ಸೇವೆ ನೀಡಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಹೀಗಾಗಿ ಸಮುದಾಯ ಆರೋಗ್ಯ ಕೇಂದ್ರಗಳಿಗೂ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಹೊಸ ತಾಲ್ಲೂಕು ರಚನೆಯಾಗಿರುವ ಕಡೆಗಳಲ್ಲಿ, ದೂರ ಇರುವ ಸ್ಥಳಗಳ ಆಸ್ಪತ್ರೆಗಳಲ್ಲಿನ ವೈದ್ಯರನ್ನು ಇಲ್ಲಿಗೆ ಸ್ಥಳಾಂತರಿಸುವುದಿಲ್ಲ, ಒಟ್ಟಾರೆ ಜನರಿಗೆ ಒಳ್ಳೆಯ ಆರೋಗ್ಯ ಸೇವೆ ಸಿಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳ್ಳೆಯ ಚಿಕಿತ್ಸೆ, ಓಷಧಿ ಸಿಗುತ್ತದೆ ಎಂಬ ಭಾವನೆ ಸಾರ್ವಜನಿಕರಿಗೆ ಬರಬೇಕು. ಇಲಾಖೆಯ ಕಾರ್ಯವೈಖರಿಗಳಲ್ಲಿ ಸುಧಾರಣೆಗಳನ್ನು ತರುವಾಗ ಆರಂಭದಲ್ಲಿ ಕೆಲವೊಂದು ಸಮಸ್ಯೆ ಬರುವುದು ಸಹಜ, ಅವುಗಳನ್ನು ಪರಿಹರಿಸಿ, ಉತ್ತಮ ಸೇವೆ ಲಭ್ಯವಾಗುವಂತೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
----
ಹೊಸದಾಗಿ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಸಮಿತಿ ರಚನೆ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ ಸುವರ್ಣ ವಿಧಾನಸೌಧ ಡಿ. 11 (ಕರ್ನಾಟಕ ವಾರ್ತೆ) :
ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಬಗ್ಗೆ ಐಪಿಹೆಚ್‌ಎಸ್ ಮಾರ್ಗಸೂಚಿ ಹಾಗೂ ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ನಿವೃತ್ತ ಅಧಿಕಾರಿ ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯ ಮಾರ್ಗದರ್ಶನದಂತೆ ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ವಿಭಾಗದಲ್ಲಿ ಆಸ್ಪತ್ರೆಗಳನ್ನು ಮಂಜೂರು ಮಾಡಲು ಅಥವಾ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಇದೇ ಸಮಿತಿಯ ವರದಿ ಆಧಾರದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುವುದು. 2022 ರ ಮಾರ್ಗಸೂಚಿಯನ್ವಯ ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜನಸಂಖ್ಯೆ ಆಧಾರದ ಮೇಲೆ ಸ್ಥಾಪಿಸಲಾಗುತ್ತಿದ್ದು, ಸಮತಟ್ಟು ಪ್ರದೇಶದಲ್ಲಿ 1,20,000 ಜನಸಂಖ್ಯೆಗೆ ಹಾಗೂ ಗುಡ್ಡಗಾಡು ಗಿರಿಜನ ಪ್ರದೇಶದಲ್ಲಿ 80,000 ಜನಸಂಖ್ಯೆಗೆ ಅನುಗುಣವಾಗಿ ಸ್ಥಾಪಿಸಲಾಗುತ್ತಿದೆ. ನಗರೀಕರಣದ ಕಾರಣದಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುತ್ತಿದ್ದು, ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯೆ ಕುಸಿತ ಕಂಡುಬರುತ್ತಿದೆ. ಹೀಗಾಗಿ ಜನಸಂಖ್ಯೆಯನ್ನು ಪರಿಗಣಿಸುವ ವಿಷಯದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
----
90 ಸರ್ಕಾರಿ ಐ.ಟಿ.ಐ. ಗಳಿಗೆ ಯಂತ್ರೋಪಕರಣ ಒದಗಿಸಲು 50 ಕೋಟಿ ರೂ. ಅನುದಾನ- ಡಾ. ಶರಣಪ್ರಕಾಶ್ ಪಾಟೀಲ
ಬೆಳಗಾವಿ ಸುವರ್ಣ ವಿಧಾನಸೌಧ ಡಿ. 11 (ಕರ್ನಾಟಕ ವಾರ್ತೆ) :
ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕೃತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು.
ಸಿರಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ರಾಜ್ಯದ 90 ಸರ್ಕಾರಿ ಐಟಿಐ ಗಳಲ್ಲಿ ಡಿ.ಜಿ.ಟಿ. ನವದೆಹಲಿ ಅವರ ಪರಿಷ್ಕೃತ ಪಠ್ಯಕ್ರಮದ ಅನುಸಾರ ಅಗತ್ಯವಿರುವ ಯಂತ್ರೋಪಕರಣಗಳನ್ನು ಒದಗಿಸಲು ಈಗಾಗಲೆ ಟೆಂಡರ್ ಕರೆಯಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಸಿರಗುಪ್ಪದ ಸರ್ಕಾರಿ ಐಟಿಐ ಸಂಸ್ಥೆಗೂ ಕೂಡ ಹೊಸದಾಗಿ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಿ, ಒದಗಿಸಲಾಗುವುದು ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.
---
ಪರಿಭಾವಿತ (ಡೀಮ್ಡ್) ಅರಣ್ಯ ವೀಸ್ತಿರ್ಣ ಪುನರ್‌ಪರೀಶೀಲನೆಗೆ ಸಮಿತಿ ರಚನೆ
ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ಜಂಟಿ ಸರ್ವೇಗೆ ಆದೇಶ
-ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಳಗಾವಿ ಸುವರ್ಣ ವಿಧಾನಸೌಧ ಡಿ. 11 (ಕರ್ನಾಟಕ ವಾರ್ತೆ) :
ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರೀಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು.
ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸರ್ವೇ ನಡೆಸಲು ಆದೇಶ ಮಾಡಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವಿಸ್ತೀರ್ಣ ಪುನರ್ ಪರೀಶೀಲಿಸಲು ನೇಮಿಸಿರುವ ಸಮಿತಿ 6 ತಿಂಗಳಿನಲ್ಲಿ ತನ್ನ ವರದಿ ನೀಡಲಿದೆ. ಇದಕ್ಕೂ ಮುನ್ನ ಪ್ರತಿ ಜಿಲ್ಲೆಗೆ ಸಂಬಂಧಿಸಿದಂತೆ ಪರಿಭಾವಿತ ಅರಣ್ಯ ವಿಸ್ತೀರ್ಣ ಕುರಿತು ಜಿಲ್ಲಾ ಕೆ.ಡಿ.ಪಿ ಸಭೆಯಲ್ಲಿ ವರದಿ ಮಂಡಿಸಿ, ಎಲ್ಲಾ ಶಾಸಕರಿಗೂ ಮಾಹಿತಿ ನೀಡುವಂತೆ ಇಲಾಖೆಯಿಂದ ಆದೇಶ ನೀಡಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಕೋಲಾರ ಜಿಲ್ಲೆಯಲ್ಲಿ 36992 ಹೆಕ್ಟೇರ್ ಮೀಸಲು, 545.65 ಹೆಕ್ಟೇರ್ ಗ್ರಾಮ, 2885.59 ಹೆಕ್ಟೇರ್ ರಕ್ಷಿತ, ಸೆಕ್ಷೆನ್ 04 ಅಡಿ 1047.55 ಹೆಕ್ಟೇರ್, 5529.89 ಹೆಕ್ಟೇರ್ ವರ್ಗೀಕರಿಸಿದ ಹಾಗೂ 4986.70 ಹೆಕ್ಟೇರ್ ಪರಿಭಾವಿತ ಅರಣ್ಯವಿದೆ. ಒಟ್ಟಾರೆ ಜಿಲ್ಲೆಯಲ್ಲಿ 51987 ಹೆಕ್ಟೇರ್ ಅರಣ್ಯ ಪ್ರದೇಶವಿದೆ. ಕಂದಾಯ, ಮೋಜಿಣಿ ಮತ್ತು ಅರಣ್ಯ ಇಲಾಖೆಗಳು ಜಂಟಿ ಮೋಜಿಣಿ ಕಾರ್ಯಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ಪ್ರದೇಶವನ್ನು ಗುರುತಿಸಿದ್ದಾರೆ. ಕರ್ನಾಟಕ ಅರಣ್ಯ ಕಾಯಿದೆ 1964ರ ಕಲಂ 64(ಎ) ಅನ್ವಯ ಒತ್ತುವರಿದಾರರಿಗೆ ನೋಟಿಸ್ ನೀಡಲಾಗಿದೆ. ಒಮ್ಮೆ ಪಹಣಿಯಲ್ಲಿ ಅರಣ್ಯ ಎಂದು ನಮೂದಾರೆ ಯಾವುದೇ ಕಾರಣಕ್ಕೂ ಅರಣ್ಯ ಇಲಾಖೆ ಅನುಮತಿ ಪಡೆಯದೆ ಸಂಬಂದಿಸಿದ ಜಮೀನನ್ನು ಯಾರಿಗೂ ಮಂಜೂರು ಮಾಡಲು ಬರುವುದಿಲ್ಲ. ಸರ್ವೋಚ್ಛ ನ್ಯಾಯಾಲಯವು ಸಹ ಒಮ್ಮೆ ಅರಣ್ಯ ಎಂದರೆ ಸದಾ ಅರಣ್ಯ ಎಂದು ತೀರ್ಿನಲ್ಲಿ ಉಲ್ಲೇಖಿಸಿದೆ. ಖಾಸಗಿ ಹಾಗೂ ಪಟ್ಟಾ ಜಮೀನು ಹೊಂದಿರವ ಯಾರನ್ನು ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸಿ ತೊಂದರೆ ನೀಡಿಲ್ಲ ಎಂದು ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಬಂಗಾರಪೇಟೆ ತಾಲ್ಲೂಕಿನ ಇಂದಿರಾಗಾಂಧಿ ಪಾರ್ಕ್ ಅಭಿವೃದ್ಧಿ ಪಡಿಸಲು 2016-17 ರಿಂದ 2025-26 ರವರೆಗೆ ರೂ.2.37 ಕೋಟಿ ಅನುದಾನ ನೀಡಲಾಗಿದೆ. ಅಗತ್ಯವಿದ್ದಲ್ಲಿ ಶಾಸಕರ ಬೇಡಿಕೆ ಮೇರೆಗೆ ಅನುದಾನ ಒದಗಿಸಲಾಗುವುದು. ಮಾಲೂರು ವ್ಯಾಪ್ತಿಯಲ್ಲಿ ಆನೆಗಳ ಹಾವಳಿ ತಡೆಗಟ್ಟಲು 74.43 ಕಿ.ಮೀ. ಸೋಲಾರ್ ತಂತಿಬೇಲಿ ಅಳವಡಿಸಲಾಗಿದೆ. ತಂತಿಬೇಲಿ ನಿರ್ವಹಣೆ ಅಗತ್ಯ ಇರುವ ಅನುದಾನವನ್ನು ಸಹ ನೀಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ರಾಜ್ಯದ ಎಲ್ಲೆಡೆ ಪರಿಭಾವಿತ ಅರಣ್ಯ ವಿಸ್ತೀರ್ಣದ ಗೊಂದಲ ನಿವಾರಣೆ ಸರ್ಕಾರ ಸಮಿತಿ ರಚಿಸಿರುವುದು ಸ್ವಾಗತಾರ್ಹ ಕಾರ್ಯವಾಗಿದೆ. ಸಮಿತಿ ರಚಿಸುವ ವರದಿಯನ್ನು ಸ್ಥಳೀಯ ಶಾಸಕರ ಗಮನಕ್ಕೆ ತರಬೇಕು. ಜಂಟಿ ಸರ್ವೇಕಾರ್ಯ ಮುಗಿಯುವವರೆಗೆ ಜನರನ್ನು ಒಕ್ಕಲೆಬ್ಬಿಸಬಾರದು ಎಂದು ಶಾಸಕರುಗಳಾದ ಸಿ.ಸಿ.ಪಾಟೀಲ್, ಸುನಿಲ್‌ಕುಮಾರ್, ಅರಗಜ್ಞಾನೇಂದ್ರ, ಭಾಗೀರತಿ ಮರುಳ್ಯ ಸೇರಿದಂತೆ ಶಾಸಕರು ಸಚಿವರಲ್ಲಿ ಕೋರಿದರು.
=========
ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆ ಮಂಜೂರು
-ಸಚಿವ ಎಸ್.ಮಧು ಬಂಗಾರ್ಪ
*******
ಬೆಳಗಾವಿ ಸುವರ್ಣ ವಿಧಾನಸೌಧ ಡಿ. 11 (ಕರ್ನಾಟಕ ವಾರ್ತೆ) :
ದೇವದುರ್ಗ ವಿಧಾನ ಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದರು.
ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ಪ್ರೌಢಶಾಲೆಗಳು ಇರುವುದಿಲ್ಲ. ಆದ್ದರಿಂತ ಈ ಎರಡು ಶಾಲೆಗಳ ಪೈಕಿ ಒಂದನ್ನು ಪ್ರೌಢಶಾಲೆಯಾಗಿ ಉನ್ನತಿಕರಿಸಲು ಸರ್ಕಾರ ಮಂಜೂರಾತಿ ನೀಡಲಿದೆ. ಇದರಿಂದ ನವಿಲಗುಡ್ಡ, ಬಾಗೂರು, ನೀಲವಂಜಿ, ಕರಡಿಗುಡ್ಡ, ಮಂಡಲಗುಡ್ಡ ಮತ್ತು ಹೇರುಂಡಿ ಶಾಲೆಗಳ ಮಕ್ಕಳಿಗೆ ಅನುಕೂಲವಾಗಲಿದೆ ಎಂದರು.
ಮಲ್ಲೇಗೌಡರ ದೊಡ್ಡಿ ಗ್ರಾಮದಲ್ಲಿ ಕೆ.ಕೆ.ಆರ್.ಡಿ.ಬಿ ಅನುದಾನದಲ್ಲಿ ಶಾಲಾ ಕಟ್ಟಡಗಳು ಹಾಗೂ ಶೌಚಾಲಯಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇಲ್ಲಿ ಶಿಕ್ಷಕರನ್ನು ನಿಯೋಜಿಸಿ ತಾತ್ಕಾಲಿಕವಾಗಿ ಬ್ರ್ಯಾಂಚ್ ಶಾಲೆ ತೆರೆಯಲಾಗಿದೆ. ಮಲ್ಲೇಗೌಡರ ದೊಡ್ಡಿಯಲ್ಲಿ ನಿಯಮಾನುಸಾರ ಪ್ರಾಥಮಿಕ ಶಾಲೆ ಮಂಜೂರು ಮಾಡಲು ಪರೀಶೀಲನೆ ನಡೆಸುವುದಾಗಿ ಸಚಿವ ಎಸ್.ಮಧು ಬಂಗಾರ್ಪ ತಿಳಿಸಿದರು.
=========
ಹೊಸ ನ್ಯಾಯಬೆಲೆ ಅಂಗಡಿಗೆ ಮಂಜೂರಾತಿ; ಗ್ರಾಮಗಳಲ್ಲಿ ಉಪ ಕೇಂದ್ರ ತೆರೆದು ಆಹಾರ ಧಾನ್ಯ ಹಂಚಿಕೆಗೆ ಕ್ರಮ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11.(ಕ.ವಾ.):
ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣ 2016 ಕಲಂ(6)ರಲ್ಲಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ಸಣ್ಣ ಗ್ರಾಮದ ಪಡಿತರ ಚೀಟಿದಾರರಿಗೆ ತೊಂದರೆಯಾಗದಂತೆ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಗ್ರಾಮಗಳಲ್ಲಿ ಉಪ ಕೇಂದ್ರಗಳನ್ನು ತೆರೆದು ಆಹಾರ ಧಾನ್ಯ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಗಳ ಸಂಖ್ಯಾನುಸಾರ ಅಗತ್ಯವಿದ್ದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು.
ಅಗತ್ಯಾನುಸಾರ ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಕ್ರಮ ವಹಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಆಥವಾ ಪರಿಶಿಷ್ಟ ಪಂಗಡಗಳ ಸಮುದಾಯಗಳ ಜನಸಂಖ್ಯೆಯು 40ಅಕ್ಕಿಂತ ಹೆಚ್ಚಿರುವ ನ್ಯಾಯಬೆಲೆ ಅಂಗಡಿ ಪ್ರದೇಶದಲ್ಲಿ ಆದ್ಯತೆಯ ಮೇಲೆ ಹೊಸ ನ್ಯಾಯಬೆಲೆ ಅಂಗಡಿಗಳು ಮತ್ತು ನವೀಕರಿಸಿದ ನ್ಯಾಯಬೆಲೆ ಅಂಗಡಿಗಳನ್ನು ಆ ಸಮುದಾಯದವರಿಗೆ ನೀಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಸಂಘ ಸಂಸ್ಥೆಗಳಿಗೆ/ಸಮುದಾಯದ ಖಾಸಗಿ ವ್ಯಕ್ತಿಗಳಿಗೆ ಮೀಸಲಾತಿಯನ್ನು ಅನುಸರಿಸಿ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಆದ್ಯತೆ ನೀಡುವ ಬಗ್ಗೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿದೆ. ಸರ್ಕಾರದ ಆದೇಶದಂತೆ 75 ವಯಸ್ಸಿನ ಮೇಲ್ಪಟ್ಟ ಒಂಟಿ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಅನ್ನಸುವಿಧಾ ಮಾಡ್ಯುಲ್ ಮೂಲಕ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಪಡಿತರ ವಿತರಣೆ ಕಾರ್ಯವನ್ನು ಅನುಷ್ಠಾನಗೊಳಿಸಲಾಗಿರುತ್ತದೆ ಎಂದು ಸಚಿವ ಕೆ. ಹೆಚ್.ಮುನಿಯಪ್ಪ ವಿಧಾನಸಭೆಯಲ್ಲಿ ವಿವರಿಸಿದರು.
ಾಲೆಗಳ ಮೂಲಸೌಕರ್ಯಕ್ಕೆ ಕ್ರಮ
ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಎಸ್.ಮಧುಬಂಗಾರ್ಪ
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11.(ಕ.ವಾ.):
ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್ ಶೌಚಾಲಯ, ಕುಡಿಯುವ ನೀರು, ಬೇಲಿ ಮತ್ತು ಆಟದ ಮೈದಾನ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ ಹಾಗೂ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲಾ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆಗೆ ಅನುದಾನ ಬಿಡುಗಡೆಯಾಗಿದ್ದು, ಎಲ್ಲಾ ಮಕ್ಕಳಿಗೂ ಶೂ-ಸಾಕ್ಸ್ ವಿತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರ್ಪ ಅವರು ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹಾಗೂ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕರ ವಿಷಯವಾರು ಹಾಗೂ ಭಾಷಾವಾರು ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯೋಜಿಸಿಕೊಳ್ಳಲು ಅನುಮತಿ ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ 5000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆ
ಬೆಳಗಾವಿ, ಸುವರ್ಣ ವಿಧಾನಸೌಧ ಡಿ.09 (ಕ.ವಾ.):- 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕಗಳನ್ನು ಉಪಮುಖ್ಯಮಂತ್ರಿಗಳ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ. ಮಹಾದೇವಪ್ಪ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವನ್ನು ಅಂಗೀಕರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 