ಬೆಂಗಳೂರು, ಮಾ.20 : ಮಂಡ್ಯ ಲೋಕಸಭಾ ಚುನಾವಣ ಕಣ ಮತ್ತಷ್ಟು ಕಾವೇರುತ್ತಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಅಂಬರೀಷ್ ಪತ್ನಿ ನಟಿ ಸುಮಲತಾ ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಾಮಪತ್ರ ಸಲ್ಲಿಸಿದರು. ಈ ಮೂಲಕ ಸುಮಲತಾ ಅವರು ಅಧಿಕೃತವಾಗಿ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಸುಮಲತಾ, ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಶ್ರೀಚಾಮುಂಡೇಶ್ವರಿಗೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ಅಪಾರ ಸಂಖ್ಯೆಯ ಬೆಂಬಲಿಗರು, ಅಂಬಿ ಅಭಿಮಾನಿಗಳ ಜತೆಗೆ ಸಿಲ್ವರ್ ಜ್ಯುಬಿಲಿ ಪಾರ್ಕ್ ಗೆ ಬೃಹತ್ ಮೆರವಣಿಗೆ ಮೂಲಕ ಆಗಮಿಸಿದರು.
ಈ ಮುನ್ನ ಕೆಪಿಸಿಸಿ ಸದಸ್ಯ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡ ಇಂಡವಾಳು ಸಚ್ಚಿದಾನಂದ ನಿವಾಸಕ್ಕೆ ತೆರಳಿ ಅಂಬರೀಷ್ ಅಭಿಮಾನಿಗಳ ಜತೆ ಮಾತುಕತೆ ನಡೆಸಿದರು. ಇನ್ನೊಂದೆಡೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಸಹ ಸುಮಲತಾ ಅವರಿಗೆ ಬೆಂಬಲ ವ್ಯಕ್ತಪಡಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಬೈಕ್ ಜಾಥಾ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿದ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ಬಾವುಟಗಳು ರಾರಾಜಿಸಿದ್ದು ವಿಶೇಷವಾಗಿತ್ತು.
ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಸುಮಲತಾ ಅವರನ್ನು ಬೆಂಬಲಿಸುತ್ತಿದ್ದು, ಸಂಧಾನಕ್ಕಾಗಿ ಪಕ್ಷದ ವರಿಷ್ಠರು ಜಿಲ್ಲೆಗೆ ಆಗಮಿಸುವುದು ಬೇಡ. ಜಿಲ್ಲೆಯಲ್ಲಿ ಪಕ್ಷದ ಉಳಿವಿಗಾಗಿ ಸುಮಲತಾ ಅವರಿಗೆ ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಇಂಡುವಾಳು ಸಚ್ಚಿದಾನಂದ ಹೇಳಿಕೆ ನೀಡಿದ್ದರು.
ಅದರಂತೆ ಇಂದು ಸುಮಲತಾ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸುಮಲತಾ ಪರವಾಗಿ ಮೂವತ್ತು ಸೂಚಕರು ಸಹಿ ಹಾಕಿದ್ದು, ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಸೇರಿದಂತೆ ಮಂಡ್ಯ ಜಿಲ್ಲೆಯ ಕೆಲ ಕಾಂಗ್ರೆಸ್ ಮುಖಂಡರು ಸುಮಲತಾ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದರು.
ಮೆರವಣಿಗೆಯಲ್ಲಿ ಚಿತ್ರರಂಗದ ಗಣ್ಯರಾದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಟ ದೊಡ್ಡಣ್ಣ, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಸೇರಿದಂತೆ ಅನೇಕ ನಟ ನಟಿಯರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆ ಹಾಗೂ ಜಾಥಾ ಸಂದರ್ಭದಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.