ಬೀದರ್‌ನ ವಿದ್ಯಾರ್ಥಿಗಳು, ಹೆತ್ತವರ ಮೇಲಿನ ಪ್ರಕರಣ ಹಿಂಪಡೆಯಬೇಕು: ಸಿದ್ದರಾಮಯ್ಯ

ಬೆಂಗಳೂರು, ಫೆ.8 :     ಕತೆ, ಕವನ, ನಾಟಕಗಳಂತಹ ಸೃಜನಶೀಲ ಅಭಿವ್ಯಕ್ತಿಯನ್ನು ದಮನಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಹಿಸಿಕೊಂಡಿರಲು ಸಾಧ್ಯ ಇಲ್ಲ. ಈ ಹಿನ್ನೆಲೆಯಲ್ಲಿ ಬೀದರ್‌ನ ವಿದ್ಯಾರ್ಥಿಗಳು ಮತ್ತು ಹೆತ್ತವರ ಮೇಲಿನ ಪ್ರಕರಣ ಮಾತ್ರವಲ್ಲ, ಬಳ್ಳಾರಿಯ ಕವಿಯ ಮೇಲೆ ದಾಖಲಿಸಿರುವ ಪ್ರಕರಣವನ್ನು ವಾಪಾಸು ಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಈಗ ಕಲ್ಯಾಣ ಕರ್ನಾಟಕದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಬೇಕೆಂಬ ಬೇಡಿಕೆಯನ್ನು ತಿರಸ್ಕರಿಸಿದವರು, ವಿರೋಧಿಸಿದವರು ಯಾರು ಎನ್ನುವುದನ್ನು ಕೂಡಾ ಮರೆಯಬಾರದು. ನಮ್ಮ ಸರ್ಕಾರ ಈ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಿದ್ದರಿಂದಲೇ ಇಂದು ಉದ್ಯೋಗ ಶಿಕ್ಷಣದಲ್ಲಿ ವಿಶೇಷ ಮೀಸಲಾತಿ ಸಿಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮಾನತೆ ದೂರಮಾಡಿ ಹೈದರಾಬಾದ್ ಕರ್ನಾಟಕಕ್ಕೆ ಪ್ರಾದೇಶಿಕ ನ್ಯಾಯ ದೊರಕಿಸಿಕೊಡಬೇಕೆಂದು ನಮ್ಮ‌ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ಪರಿಚ್ಚೇದ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿತ್ತು. ಈ ಕಾರಣದಿಂದಲೇ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚನೆಯಾಗಿರುವುದು ಎಂದವರು ತಿಳಿಸಿದ್ದಾರೆ.

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸುವ ಬಗ್ಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಾವೆಲ್ಲ ಒಗ್ಗಟ್ಟಾದರೆ ಬದಲಾವಣೆ ಸಾಧ್ಯ ಎಂದು ವಿನಂತಿಸಿದೆ. ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಅವರ ಅಭಿಪ್ರಾಯ ಸಂಗ್ರಹಿಸಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ಪ್ರಧಾನಿಯವರಿಗೂ ಪತ್ರ ಬರೆದೆ ಎಂದು ಅವರು ಸ್ಮರಿಸಿದ್ದಾರೆ.