ಶ್ರೀನಗರ, ಜ 12 : ಹಿಮಪಾತ ಮತ್ತು ಆಗಸದ ಸ್ಪಷ್ಟ ಗೋಚರತೆ ಇಲ್ಲದ ಕಾರಣ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ಭಾನುವಾರ ಸ್ಥಗಿತಗೊಳಿಸಲಾಗಿದೆ.
ಶ್ರೀನಗರ ವಿಮಾನ ನಿಲ್ದಾಣಕ್ಕೆ ಬರುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಯುಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಭಾರಿ ಹಿಮಪಾತವಾಗುತ್ತಿದ್ದು ನೋಟ ಸ್ಪಷ್ಟವಾಗಿಲ್ಲದ ಕಾರಣ ಕಣಿವೆಯ ಏಕೈಕ ವಿಮಾನ ನಿಲ್ದಾಣದಿಂದ ವಿಮಾನ ಸೇವೆ ಪುನರಾರಂಭಿಸುವ ಸಾಧ್ಯತೆಗಳು ತೀರಾ ಕಡಿಮೆ ಎಂದು ಅವರು ಹೇಳಿದರು.
ಶ್ರೀನಗರ ಸೇರಿದಂತೆ ಕಣಿವೆಯಲ್ಲಿ ಮುಂದಿನ 24 ಗಂಟೆಗಳಲ್ಲಿ ಮತ್ತೆ ಹಿಮ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.