ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಸಿಇಓ ರಿಷಿ ಆನಂದ ಭೇಟಿ : ಪರೀಶೀಲನೆ

CEO Rishi Anand visits CET exam centers: Inspection

ವಿಜಯಪುರ, ಏ.16 : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಬುಧವಾರ ನಗರದ ಪಿಡಿಜೆ ಪದವಿ ಪೂರ್ವ ಕಾಲೇಜು ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ  ನಡೆಯುತ್ತಿರುವ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ, ಪರೀಕ್ಷೆ ಕೇಂದ್ರಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಪರೀಶೀಲನೆ ನಡೆಸಿದರು.  

ನಗರದ ಪಿ.ಡಿ.ಜೆ ಪಿಡಿಜೆ ಪದವಿಪೂರ್ವ ಕಾಲೇಜು ಮತ್ತು ಸರ್ಕಾರಿ ಮಹಿಳೆಯರ ಮತ್ತು ಪುರುಷರ  ಪದವಿ ಪೂರ್ವ  ಕಾಲೇಜುಗಳಿಗೆ ಸಿ.ಇ,ಟಿ  ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿ, ವಿದ್ಯಾರ್ಥಿಗಳಿಗೆ ಆಸನಗಳ ವ್ಯವಸ್ಥೆ, ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವ ಕುರಿತು ಪರೀಶೀಲನೆ ನಡೆಸಿದರು.  

ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಿರುವುದೂ ಸೇರಿದಂತೆ ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಮಾಡಿರುವ ಕುರಿತು ಸಮಗ್ರ ಪರೀಶೀಲನೆ ನಡೆಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಂಡು, ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಕಡ್ಡಾಯವಾಗಿ ಕೊಠಡಿಗಳಲ್ಲಿ ವಿದ್ಯುತ್ ದೀಪದ ವ್ಯವಸ್ಥೆ,  ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವ್ಯವಸ್ಥೆಗೆ ಅಗತ್ಯ ಕ್ರಮಕ್ಕೆ ಅವರು ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಬಸವರಾಜ ಗಂಗನಳ್ಳಿ, ಪರೀಕ್ಷಾ ವೀಕ್ಷಕರಾದ ಎಸ್‌. ಎಸ್‌. ಅಂಗಡಿ, ಪ್ರಶ್ನೆ ಪತ್ರಿಕೆ ಪಾಲಕರಾದ ದಂದರಗಿ, ಕೊಠಡಿ ಮೇಲ್ವಿಚಾರಕರು, ಗಣಕಯಂತ್ರ ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.