ಶ್ರೀಕೃಷ್ಣ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌

ಶ್ರೀಕೃಷ್ಣ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌ Celebrate Shrikrishna Jayanti meaningfully: Deputy Collector Dr. Durgesh K.R


ಗದಗ, ಆ.27: ಸೆಪ್ಟೆಂಬರ್ 4ರಂದು ನಡೆಯಲಿರುವ ಶ್ರೀಕೃಷ್ಣ ಜಯಂತಿಯನ್ನು ಎಲ್ಲರ ಸಹಕಾರ ಹಾಗೂ ಸಮನ್ವಯದೊಂದಿಗೆ ಯಾವುದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್‌. ಅಧಿಕಾರಿಗಳಿಗೆ ಸೂಚಿಸಿದರು.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಶ್ರೀಕೃಷ್ಣ ಜಯಂತಿ ಆಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಜಯಂತಿ ಅಂಗವಾಗಿ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ವಿತರಿಸುವುದು, ವೇದಿಕೆ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕುಗಳು, ಶಾಲಾ-ಕಾಲೇಜುಗಳು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಶ್ರೀಕೃಷ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.  

ಶ್ರೀಕೃಷ್ಣನ ಜೀವನ, ತತ್ವಾದರ್ಶಗಳು ಹಾಗೂ ಭಗವದ್ಗೀತೆಯ ಸಂದೇಶವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಯಂತಿ ಅಂಗವಾಗಿ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.  

ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು, ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದರು.  

ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು, ಊಟೋಪಚಾರ, ಆಸನ ವ್ಯವಸ್ಥೆ ಹಾಗೂ ವೇದಿಕೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.  

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.