ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್

ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿ: ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್  Celebrate the Gauri-Ganesha festival in an eco-friendly manner: Deputy Commissioner C.N. Sridhar


ಗದಗ (ಕರ್ನಾಟಕ ವಾರ್ತೆ), ಸೆ.3: ಜಿಲ್ಲಾದ್ಯಂತ ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಶಿಸ್ತುಬದ್ಧವಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಸಾರ್ವಜನಿಕರಿಗೆ ಕರೆ ನೀಡಿದರು.  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗೌರಿ-ಗಣೇಶ ಹಬ್ಬದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ರಾಜ್ಯ ಸರ್ಕಾರವು ಜಲಮೂಲಗಳಾದ ನದಿ, ತೊರೆ, ಹಳ್ಳ, ಕೆರೆ ಹಾಗೂ ಬಾವಿಗಳು ಮಾಲಿನ್ಯಗೊಳ್ಳದಂತೆ ಸಂರಕ್ಷಿಸುವ ಉದ್ದೇಶದಿಂದ ರಾಸಾಯನಿಕ ಬಣ್ಣಗಳಿಂದ ಅಲಂಕರಿಸಲಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ಉತ್ಪಾದನೆ, ಮಾರಾಟ ಹಾಗೂ ಜಲಮೂಲಗಳಲ್ಲಿ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆದ್ದರಿಂದ ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಗಳಿಂದ ಲೇಪಿಸಲಾದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸಬೇಕು ಎಂದು ತಿಳಿಸಿದರು.  

ಗಣೇಶ ಮೂರ್ತಿಗಳ ವಿಸರ್ಜನೆಯನ್ನು ಸ್ಥಳೀಯ ಸಂಸ್ಥೆಗಳು ನಿಗದಿಪಡಿಸಿರುವ ಸಂಚಾರಿ ವಿಸರ್ಜನಾ ತೊಟ್ಟಿಗಳು ಅಥವಾ ಕಲ್ಯಾಣಿಗಳಲ್ಲಿಯೇ ಮಾಡಬೇಕು. ಹಬ್ಬದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.  

ಗಣೇಶ ಚತುರ್ಥಿಯನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳಲ್ಲಿ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವಂತೆ ಸಲಹೆ ನೀಡಿದರು. ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಸೇರಿದಂತೆ ಹಸಿಕಸವನ್ನು ನೀರಿಗೆ ಹಾಕದೆ ಪ್ರತ್ಯೇಕವಾಗಿ ಸಂಗ್ರಹಿಸಿ ಸ್ಥಳೀಯ ಸಂಸ್ಥೆಗಳ ಮೂಲಕ ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.  

ಸರ್ಕಾರದ ಆದೇಶ ಹಾಗೂ ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾತ್ರಿ 10ರಿಂದ ಬೆಳಿಗ್ಗೆ 6ರವರೆಗೆ ತುರ್ತು ಸಂದರ್ಭ ಹೊರತುಪಡಿಸಿ ಧ್ವನಿವರ್ಧಕ, ಡೋಲು, ತಮಟೆ ಸೇರಿದಂತೆ ಶಬ್ದ ಉಂಟುಮಾಡುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.  

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ನಿಗದಿತ ಸಮಯದಲ್ಲಿ ಮಾತ್ರ ಸಿಡಿಸಬೇಕು. ರಸ್ತೆ ಹಾಗೂ ಚರಂಡಿಗಳಲ್ಲಿ ಹೂವಿನ ಹಾರ, ತಟ್ಟೆ, ಲೋಟ, ಎಲೆ ಸೇರಿದಂತೆ ಯಾವುದೇ ತ್ಯಾಜ್ಯವನ್ನು ಎಸೆಯದೆ, ಮನೆಗಳ ಬಳಿ ಬರುವ ಸ್ಥಳೀಯ ಸಂಸ್ಥೆಗಳ ಕಸದ ವಾಹನಗಳಿಗೆ ನೀಡಬೇಕು ಎಂದು ತಿಳಿಸಿದರು.  

ಹಬ್ಬದ ಅಲಂಕಾರದಲ್ಲಿ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್‌. ಮುಂಡರಗಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.