ಶಿವಮೊಗ್ಗ, ಅ.24: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಗುರುವಾರ ಶಿವಮೊಗ್ಗದಲ್ಲಿ ಪ್ರವಾಹ ಪರಿಸ್ಥಿತಿ ಕುರಿತು ಅವಲೋಕನಾ ಸಭೆ ನಡೆಸಿದರು. ಭಾರೀ ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಪ್ರದೇಶ, ಕೈಗೊಂಡ ಪರಿಹಾರ ಕಾರ್ಯಗಳು, ಸಂತ್ರಸ್ತರಾದವರ ಸಂಕಷ್ಟಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರವಾಹದ ಪ್ರಮಾಣ ಮತ್ತು ಎಲ್ಲೆಲ್ಲಿ ಅತೀ ಹೆಚ್ಚು ಪ್ರವಾಹಕ್ಕೆ ಹಾನಿಗಳಾಗಿವೆ ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಅವರು, ತಕ್ಷಣ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಪರಿಹಾರ ಕಾರ್ಯದಲ್ಲಿ ಕಾರ್ಯಪ್ರವೃತ್ತರಾಗಬೇಕು. ನೆರೆಯಲ್ಲಿ ಸಿಕ್ಕಿ ಹಾಕಿಕೊಂಡವರನ್ನು ರಕ್ಷಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದರು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗು ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಬಳಿಕ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಸಂತ್ರಸ್ರರ ಅಹವಾಲು ಆಲಿಸಿದರು.