ಮಂಡ್ಯ, ಆ29 ಜಿಲ್ಲೆಯ ಕೃಷ್ಣರಾಜ ಸಾಗರ ಜಲಾಶಯ(ಕೆಆರ್ಎಸ್)ದಲ್ಲಿ ಗುರುವಾರ ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಭಾರಿ ಮಳೆಯು ಕರ್ನಾಟಕ ಮತ್ತು ತಮಿಳುನಾಡಿಗೆ ಜನರಿಗೆ ನೆಮ್ಮದಿ ತಂದಿದೆ ಎಂದು ಹೇಳಿದ್ದಾರೆ.
ನೀರಿನ ಹಂಚಿಕೆಯಲ್ಲಿ ಎರಡು ರಾಜ್ಯಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸದ್ಯದ ಪರಿಸ್ಥಿತಿ ಪ್ರಕೃತಿಯ ಪರಿಹಾರ ಎಂದು ಯಡಿಯೂರಪ್ಪ ಬಣ್ಣಿಸಿದ್ದಾರೆ.
'ಕೆಆರ್ಎಸ್ ಸೇರಿದಂತೆ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ನಾಲ್ಕು ಪ್ರಮುಖ ಅಣೆಕಟ್ಟುಗಳು ಎಂಟು ವರ್ಷಗಳ ಕೊರತೆಯ ನಂತರ ಸತತ ಎರಡನೇ ವರ್ಷವೂ ಜಲಾಶಯದ ಪೂರ್ಣ ಮಟ್ಟವನ್ನು (ಎಫ್ಆರ್ಎಲ್) ತಲುಪಿದ್ದು, ರೈತರು ಸೇರಿದಂತೆ ಜನರಿಗೆ ಹೆಚ್ಚು ಸಂತಸವನ್ನು ತಂದಿದೆ ಎಂದು ಹೇಳಿದರು. ಈ ಜಲಾಶಯಗಳಲ್ಲಿ ಒಟ್ಟಾರೆ 112 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ನ್ಯಾಯಮಂಡಳಿಯ ನಿರ್ದೇಶನದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ಸಾಕಷ್ಟು ಪ್ರಮಾಣದ ನೀರನ್ನು ಬಿಡುಗಡೆ ಮಾಡಿದೆ.' ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ಎಲ್ಲಾ ಕೆರೆಗಳನ್ನು ತುಂಬುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಯವರು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.
22 ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಂತರ ಸರ್ಕಾರ ತೀವ್ರ ಸವಾಲುಗಳನ್ನು ಎದುರಿಸುತ್ತಿದೆ ಎಂದ ಯಡಿಯೂರಪ್ಪ, ಕೆಲ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಇದೆ. ರಾಜ್ಯ ಸರ್ಕಾರ ಈಗಾಗಲೇ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಕೇಂದ್ರದ ತಜ್ಞರ ಸಮಿತಿ ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ತನ್ನ ವರದಿಯನ್ನು ಸಲ್ಲಿಸಿದೆ. ಪ್ರವಾಹ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ ಒಳ್ಳೆಯ ಸುದ್ದಿಯನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು.
ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸಲು ಕೆಆರ್ಎಸ್ನಲ್ಲಿರುವ 'ಬೃಂದಾವನ' ಉದ್ಯಾನವನ್ನು ಸೌಂದರ್ಯಕರಣಗೊಳಿಸುವ ಬಗ್ಗೆ ಪ್ರಸ್ತಾಪಿಸಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಈ ಬಗ್ಗೆ ಸಮಗ್ರ ಯೋಜನಾ ವರದಿಯನ್ನು ಸಲ್ಲಿಸುವಂತೆ ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಪಾಂಡವಪುರ ಸಕ್ಕರೆ ಕಾರ್ಖಾನೆ ಮತ್ತು ಮಂಡ್ಯ ಮೈಶುಗರ್ ಕಾರ್ಖಾನೆಗಳ ಪುನಶ್ಚೇತನಗೊಳಿಸುವುದಾಗಿ ಭರವಸೆ ನೀಡಿದ ಯಡಿಯೂರಪ್ಪ. ಈ ಬಗ್ಗೆಯೂ ವಿವರವಾದ ವರದಿಯನ್ನು ಕಳುಹಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
'ಬಾಗಿನ' ಅರ್ಪಿಸುವ ಸಂಪ್ರದಾಯವನ್ನು 1983 ರಲ್ಲಿ ಮುಖ್ಯಮಂತ್ರಿಯಾಗಿದ್ದ ಆರ್ ಗುಂಡೂರಾವ್ ಆರಂಭಿಸಿದ್ದರು. ಬಳಿಕ ಇದನ್ನು ಇತರ ಮುಖ್ಯಮಂತ್ರಿಗಳು ಅನುಸರಿಸುತ್ತಾ ಬಂದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 2014 ರಲ್ಲಿ ಅಣೆಕಟ್ಟು ಪೂರ್ಣ ಸಾಮಥ್ರ್ಯ ತಲುಪಿದಾಗ 'ಬಾಗಿನ' ಅರ್ಪಿಸಿದ್ದರು. ವಿಶೇಷವೆಂದರೆ, ದಿವಂಗತ ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾತ್ರ 'ಬಾಗಿನ' ಅರ್ಪಿಸಿರಲಿಲ್ಲ.
ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್.ಅಶೋಕ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ಸುಮಲತಾ ಅಂಬರೀಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.