ಧಾರವಾಡ ಫೆ. 03: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಮಾಜಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹುಬ್ಬಳ್ಳಿ-ಧಾರವಾಡ, ಕರ್ನಾಟಕ ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ, ಸರ್.ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜ.29 ರಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಧಾರವಾಡ ಸಿದ್ದೇಶ್ವರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರುಶುರಾಮ ಎಫ್.ದೊಡ್ಡಮನಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವರ್ಗದವರಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರವು ಬಡತನ, ಶಿಕ್ಷಣ, ಸಾರ್ವಜನಿಕರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಗ್ಗೆ ಜಾಗೃತಿ ಮೂಡಿಸುವುದು, ದುರ್ಬಲ ವರ್ಗದವರಿಗೆ ಕಾನೂನು ನೆರವು-ಅರಿವು ನೀಡುವುದು ಮತ್ತು ಮುಂತಾದ ವಿಷಯಗಳ ಕುರಿತು ಸದಾ ಮಾರ್ಗದರ್ಶನವನ್ನು ಮಾಡುತ್ತಿರುತ್ತದೆ. ಈ ನಿಟ್ಟಿನಲ್ಲಿ ಇಂತಹ ಮಾರ್ಗದರ್ಶನದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡದಿಂದ ಅನೇಕ ಕಾರ್ಯಕ್ರಮಗಳನ್ನು ಹಾಗೂ ಸಮೀಕ್ಷೆಗಳನ್ನು ಸಾರ್ವಜನಿಕರ ಹಿತದೃಷ್ಠಿಯಿಂದ ಮಾಡಿಸಲಾಗುತ್ತಿದೆ. ಸಿದ್ದೇಶ್ವರ ನಗರದಲ್ಲಿ ಕೂಡ ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸಮೀಕ್ಷೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಆಧಾರಕಾರ್ಡ, ಬಿ.ಪಿ.ಎಲ್‌ಕಾರ್ಡ, ರೇಷನ್‌ಕಾರ್ಡ ಹಾಗೂ ಇತರ ಅಗತ್ಯ ಸೌಲಭ್ಯಗಳನ್ನು ಪಡೆಯಲು ಬೇಕಾದ ದಾಖಲಾತಿಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಮತ್ತು ಇವುಗಳನ್ನು ಪಡೆಯಲು ತೊಂದರೆಯಿದ್ದಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ ಸೂಕ್ತ ಮಾರ್ಗದರ್ಶನವನ್ನು ಪಡೆದುಕೊಳ್ಳಲು ಮುಂದಾಗಬೇಕೆಂದು ಕಾರ್ಯಕ್ರಮದಲ್ಲಿ ಭಾಗಿಯಾದ ಜನರಿಗೆ ಸಲಹೆ ನೀಡಿದರು. ಮಕ್ಕಳಿಗೆ ದೊರೆಯುತ್ತಿರುವ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಿಕೊಂಡು ಅವರಿಗೆ ಉತ್ತಮ ನಾಗರಿಕರಾಗಿ ಮಾಡಲು ಪಾಲಕರು ನೆರವಾಗಬೇಕೆಂದರು.
ಕರ್ನಾಟಕ ವಿಶ್ವವಿದ್ಯಾಲಯದ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಮಾಡಿದ ಕಿರು ಸಮೀಕ್ಷೆಗೆ ಮೆಚ್ಚುಗೆ ವ್ಯಕ್ತಪಡಿಸಿದ ನ್ಯಾಯಾಧೀಶರು ಇಂತಹ ಕಿರು ಸಮೀಕ್ಷೆಗಳು ಜನರ ನೈಜ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ನೆರವಾಗುತ್ತವೆ ಮತ್ತು ಧಾರವಾಡ ಜಿಲ್ಲೆಯಲ್ಲಿ ಅತ್ಯಂತ ಸಮಸ್ಯೆ ಇರುವಂತಹ ಕೊಳಚೆ ಪ್ರದೇಶಗಳಲ್ಲಿ ಹಾಗೂ ಇತರ ಕೆಲವು ಸ್ಥಳಗಳಲ್ಲಿ ಸಮೀಕ್ಷೆ ಮಾಡುವ ಕುರಿತು ಚರ್ಚಿಸಲಾಗುತ್ತಿದೆಯೆಂದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ ಡಿ.ಹೆಚ್.ಹೂಗಾರ ಅವರು ಮಾತನಾಡಿ, ಸಮಾಜದಲ್ಲಿ ದುರ್ಬಲ ವರ್ಗದ ಜನರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ಸಮರ್ಕವಾಗಿ ಅನುಷ್ಠಾನಗೊಳಿಸಲು ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಜನರು ಕೂಡ ಇಂತಹ ಸೌಲಭ್ಯಗಳನ್ನು ಪಡೆದುಕೊಳ್ಳುವ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬೇಕು. ಕಂದಾಯ ಇಲಾಖೆ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಸಮರ್ಕವಾಗಿ ಜನರಿಗೆ ಮುಟ್ಟಿಸಲು ಅಗತ್ಯಕ್ರಮವನ್ನು ಕೈಗೊಳ್ಳಲಾಗಿದೆಯೆಂದು ಕಾರ್ಯಕ್ರಮದಲ್ಲಿ ಭಾಗಿಯಾದವರಿಗೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎಮ್.ಡಿ.ಸನ್ನೇರ ಅವರು ಕಾರ್ಯಕ್ರಮದಲ್ಲಿ ಇದ್ದರು.
ಕಾರ್ಯಕ್ರಮದಲ್ಲಿ ಭಾಗಿಯಾದ ಸಿದ್ದೇಶ್ವರ ನಗರದ ಜನರು ಎದುರಿಸುತ್ತಿರುವ ಕೆಲವು ಮುಖ್ಯ ಮೂಲಭೂತ ಸಮಸ್ಯೆಗಳನ್ನು ಹಿರಿಯ ಸಿವಿಲ್ ನ್ಯಾಯಾಧೀಶರ ಗಮನಕ್ಕೆ ತಂದಿದ್ದಾರೆ. ಇವುಗಳ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಸುಡಗಾಡ ಸಿದ್ದರ ಮಾಹಾಸಂಘ ಉಪಾಧ್ಯಕ್ಷ ಲಕ್ಷ್ಮಣ ಡಿ. ಕರಿಯವರ, ಕರ್ನಾಟಕ ವಿಶ್ವವಿದ್ಯಾಲಯ ಸಮಾಜಕಾರ್ಯ ವಿಭಾಗ ಪ್ರಾಧ್ಯಾಪಕಿ ಹಾಗೂ ಮುಖ್ಯಸ್ಥೆ ಡಾ. ಸಂಗೀತಾ ಆರ್. ಮಾನೆ, ಸಮಾಜಕಾರ್ಯ ವಿಭಾಗದ ಬೋಧಕ ಸಿಬ್ಬಂದಿಗಳಾದ ರಾಜವರ್ಧನ್, ತುಕಾರಾಮ್, ಡಾ. ರವೀಂದ್ರ. ಎಮ್., ಸಮಾಜ ಕಾರ್ಯಕರ್ತರಾದ ಅಶೋಕ ಕೋರಿ ಹಾಗೂ ಇತರರು ಉಪಸ್ಥಿತರಿದ್ದರು.
ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು, ಅರೆ ಕಾನೂನು ಸ್ವಯಂ ಸೇವಕರು, ಸಿದ್ದೇಶ್ವರ ನಗರದ ಸಾರ್ವಜನಿಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರಾಜು ಅವರು ನಿರೂಪಿಸಿದರು.