ಎಸ್ಎಂ ಕೃಷ್ಣ ನಿಧನಕ್ಕೆ ಗಣ್ಯರಿಂದ ಸಂತಾಪ

Condolences from dignitaries on death of SM Krishna

ಬೆಂಗಳೂರು 10: ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಸ್‌.ಎಂ.ಕೃಷ್ಣ ಅವರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳ ಫೋಟೊಗಳನ್ನು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡು, ಸಂತಾಪ ಸೂಚಿಸಿದ್ದಾರೆ.‌‌

ಕಳೆದ ಹಲವಾರು ವರ್ಷಗಳಿಂದ ಎಸ್.ಎಂ. ಕೃಷ್ಣ ಅವರೊಂದಿಗೆ ಸಂವಾದ ನಡೆಸುವ ಅನೇಕ ಅವಕಾಶಗಳು ನನಗೆ ದೊರೆತವು ಮತ್ತು ಆ ಸಂವಾದಗಳನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಅವರ ನಿಧನದಿಂದ ನನಗೆ ತೀವ್ರ ದುಃಖವಾಗಿದೆ ಅವರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಓಂ ಶಾಂತಿ -ಪ್ರಧಾನಿ ನರೇಂದ್ರ ಮೋದಿ

 ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. -ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಶಿಸ್ತು ಹಾಗೂ ಪ್ರಬುದ್ಧ ಆಡಳಿತಕ್ಕೆ ಮಾದರಿಯಾಗಿದ್ದ ನಾಡಿನ ಇತಿಹಾಸದಲ್ಲಿ ತಮ್ಮ ಸಜ್ಜನಿಕೆ ಹಾಗೂ ಘನತೆಯ ನಡವಳಿಕೆಯಿಂದ ವಿಶೇಷ ಚಾಪು ಮೂಡಿಸಿದ್ದ ಎಸ್.ಎಂ ಕೃಷ್ಣ ಅವರು ಇನ್ನಿಲ್ಲವಾಗಿರುವ ಸುದ್ದಿ ಅತ್ಯಂತ ನೋವು ತಂದಿದೆ.-ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ