ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುವ್ಯವಸ್ಥೆಯಿಂದ ನಡೆಸಿ - ರಿಷಿ ಆನಂದ ಸೂಚನೆ

Conduct SSLC exams in an orderly manner - Rishi Anand instructs

ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸುವ್ಯವಸ್ಥೆಯಿಂದ ನಡೆಸಿ   - ರಿಷಿ ಆನಂದ ಸೂಚನೆ 


ವಿಜಯಪುರ,ಮಾ.21 : ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ನಡೆದಿರುವ ನಿಮಿತ್ಯ ನಗರದ ಜಿಲ್ಲಾ ಪಂಚಾಯಿತಿಯ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರ, ಪಿ.ಡಿ.ಜೆ ಪ್ರೌಢ ಶಾಲೆ, ಬಂಜಾರಾ ಪ್ರೌಢಶಾಲೆ ಮತ್ತು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ, ಬಿಡಿಎ ಸೊಸೈಟಿ ಬಾಲಕಿಯರ ಶಾಲೆ ಮತ್ತು ಸರ್ಕಾರಿ ಬಾಲಕಿಯರ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. 


ಜಿಲ್ಲೆಯಲ್ಲಿ ನಡೆಯುತ್ತಿರುವ 131 ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಿರುವ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರ, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ಹಾಗೂ ಇಂಟರ್ನೆಟ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಹೈ-ಸ್ಪೀಡ್ ಇಂಟರ್ ನೆಟ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವುದು, ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಲೋಪಗಳು ಕಂಡು ಬಂದರೆ ಕೂಡಲೇ ನೇರವಾಗಿ ತಮ್ಮ ಗಮನಕ್ಕೆ ತರುವಂತೆಯೂ ಮತ್ತು ಉದ್ಭವಿಸುವ ಸಮಸ್ಯೆಗಳ ಕುರಿತು ಸ್ಪಷ್ಟನೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.  

ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ, ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಭೂತ ಸೌಲಭ್ಯ, ಇನ್ನುಳಿದಂತೆ ಎಲ್ಲ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಮೊಬೈಲ್ ಸ್ವಾಧೀನಾಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರೀಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ ವ್ಯಕ್ತಿಗಳು ಇಲ್ಲದೇ ಇರುವುದನ್ನೂ ಸಹ ಪರೀಶೀಲಿಸಿದರು. 

ಇದೇ ವೇಳೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯ ಮುಕ್ತ ಮತ್ತು ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಮತ್ತು ಪರೀಕ್ಷೆಗಳನ್ನು ಸುವ್ಯವಸ್ಥೆಯಿಂದ ಸಾಗಬೇಕು ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಉಪಕಾರ್ಯದರ್ಶಿಗಳಾದ ಡಾ. ವಿಜಯಕುಮಾರ ಆಜೂರ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಟಿ. ಎಸ್‌. ಕೊಲ್ಹಾರ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿಗಳು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಉಪಸ್ಥಿತರಿದ್ದರು.