ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪಾರದರ್ಶಕವಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ 18: ಮಾರ್ಚ್ 21 ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಪಾರದರ್ಶಕವಾಗಿ, ಸುಸೂತ್ರವಾಗಿ ಹಾಗೂ ಸಮರ್ಕವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಮಂಗಳವಾರ ನಗರದ ಕಂದಗಲ್ ಹನುಮಂತರಾಯ ರಂಗಮದಿರದಲ್ಲಿ ನಡೆದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಪೂರ್ವ ಸಿದ್ಧತೆ, ಅನುಸರಣೆೆ ಹಾಗೂ ಅನುಷ್ಠಾನದ ಕುರಿತು ಪುನಶ್ಚೇತನ-ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ವಹಿಸಿಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಕುರಿತು ಸೂಚನೆಗಳನ್ನು ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು ಇದಕ್ಕೆ ಪೂರಕವಾಗಿ ಸಮರ್ಕ ಇಂಟರ್ ನೆಟ್ ಹಾಗೂ ಯಾವುದೇ ತಾಂತ್ರಿಕ ಸಮಸ್ಯೆಗಳು ಉದ್ಭವಿಸದಂತೆ ಪರಿಹಾರ ಸೌಲಭ್ಯ ಕಲ್ಪಿಸಿರುವುದನ್ನು ಮೇಲಾಧಿಕಾರಿಗಳು ಮುಂಚೆಯೇ ಖಚಿತಪಡಿಸಿಕೊಳ್ಳಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ಪೂರೈಕೆಯಾಗುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಪ್ರಿಸ್ಕಿಂಗ್ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಪರೀಕ್ಷಾ ದಿನಗಳಂದು ವೆಬ್‌ಕಾಸ್ಟಿಂಗ್ ಕಡ್ಡಾಯವಾಗಿರುವುದರಿಂದ ಅಳವಡಿಸಿರುವ ಸಿಸಿಟಿವಿ ಮುಂಚಿತವಾಗಿಯೇ ಪರೀಶೀಲನೆ ನಡೆಸಬೇಕು. ಹೈ ಸ್ಪೀಡ್ ಇಂಟರನೆಟ್ ಸೌಲಭ್ಯ ಕಲ್ಪಿಸಿರಬೇಕು. ಮುಂಜಾಗ್ರತಾ ಕ್ರಮವಾಗಿ ಯುಪಿಎಸ್ ಬ್ಯಾಟರಿ ಬ್ಯಾಕ್ ಅಪ್ ವ್ಯವಸ್ಥೆ ಅಳವಡಿಸಿರಬೇಕು. ಯಾವುದೇ ಗೊಂದಲಕ್ಕೆ ಒಳಗಾಗದೇ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮಿ. ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ತುರ್ತು ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆಗಳು ತಲುಪುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಕಲ್ಪಿಉಸಿರುವ ವ್ಯವಸ್ಥೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಬೇಕು. ಯಾವುದೇ ಸಮಸ್ಯೆಗಳು ಉದ್ಭವವಾದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಪರೀಕ್ಷಾ ಮಾರ್ಗ ಸೂಚಿಗಳಂತೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.
ಮಾರ್ಚ್ 21 ರಿಂದ ಏಪ್ರಿಲ್ 04ರವರೆಗೆ ನಡೆಯುವ ಪರೀಕ್ಷೆಗೆ ಜಿಲ್ಲೆಯಲ್ಲಿ 22,908 ಬಾಲಕರು 20,168 ಬಾಲಕೀಯರು ಸೇರಿದಂತೆ ಒಟ್ಟು 43,076 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದಾರೆ. 131 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಟಿ.ಎಸ್.ಕೋಲಾರ ಅವರು ಪರೀಕ್ಷಾ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮನಗೌಡ ಹಟ್ಟಿ, ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಸಕ್ರೆಪ್ಪ ಬಿರಾದಾರ, ಜಮಖಂಡಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಆದ ಜಿಲ್ಲಾ ನೋಡಲ್ ಅಧಿಕಾರಿಗಳಾದ ಮಂಗಳಾ ನಾಯಕ, ಡೈಟ್‌ನ ಪ್ರಾಚಾರ್ಯರಾದ ಉಮಾದೇವಿ ಸೊನ್ನದ, ಶಿಕ್ಷಣಾಧಿಕಾರಿ ಅಶೋಕ ಲಿಮಕರ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪರೀಕ್ಷೆಗೆ ನಿಯೋಜಿತ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.