ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿ ವಿರುದ್ಧದ ಎಫ್‌ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ  Congress protests against the FIR filed against Rahul Gandhi


ಕೊಪ್ಪಳ  01: ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜಕೀಯ ದ್ವೇಷದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ವತಿಯಿಂದ ಸೆ. 1ರಂದು ಕೊಪ್ಪಳ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.  

ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಶೋಕ ವೃತ್ತದಲ್ಲಿ ಸಮಾವೇಶಗೊಂಡಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ, ಬಿಜೆಪಿಯು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ. ಆದರೆ ಇಂತಹ ಬೆದರಿಕೆಗಳಿಗೆ ಅವರು ಜಗ್ಗುವುದಿಲ್ಲ ಎಂದರು.  

ಸಾಮಾಜಿಕ ನ್ಯಾಯ ಹಾಗೂ ದಲಿತರ ಹಕ್ಕುಗಳ ಪರವಾಗಿ ಮಾತನಾಡುವವರ ವಿರುದ್ಧ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದರು. ದೇಶದ ಪ್ರಮುಖ ವಿಷಯಗಳು ಮುನ್ನೆಲೆಗೆ ಬಾರದಂತೆ ಇಂತಹ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಟೀಕಿಸಿದರು.  

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಾ ಇಟ್ಟಂಗಿ ಮಾತನಾಡಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿ ಹೊರಹೊಮ್ಮುತ್ತಿರುವುದನ್ನು ಬಿಜೆಪಿಗೆ ಸಹಿಸಲಾಗುತ್ತಿಲ್ಲ. ಎಫ್‌ಐಆರ್ ಹಿಂಪಡೆಯದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.  

ಕುಡಾ ಅಧ್ಯಕ್ಷ ಪ್ರಸನ್ನ ಗಡಾದ ಮಾತನಾಡಿ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಬಿಜೆಪಿ ತನ್ನ ಹೇಡಿತನ ಪ್ರದರ್ಶಿಸಿದೆ. ಜನರು ಇದನ್ನು ಗಮನಿಸುತ್ತಿದ್ದು, ಹೋರಾಟಕ್ಕೆ ಕಾಂಗ್ರೆಸ್ ಸದಾ ಸಿದ್ಧವಿದೆ ಎಂದರು.  

ಪ್ರತಿಭಟನೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಶಾ, ಎಸ್‌ಸಿ ಘಟಕದ ಅಧ್ಯಕ್ಷ ಗಾಳೆಪ್ಪ ಪೂಜಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಬರ್ ಪಾಶಾ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನೂರಾರು ಬೆಂಬಲಿಗರು ಭಾಗವಹಿಸಿದ್ದರು. ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.