ಬೆಂಗಳೂರು, ಅ 10: ರಾಜ್ಯ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಮುಂದುವರೆದಿದ್ದು, ಗುರುವಾರ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮತ್ತು ಆರ್.ಎಲ್ ಜಾಲಪ್ಪ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಗುರುವಾರ ಬೆಳ್ಳಂಬೆಳಿಗ್ಗೆಯೇ ಐಟಿ ಅಧಿಕಾರಿಗಳು ಈ ಇಬ್ಬರು ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದಾರೆ. ತುಮಕೂರಿನ ಡಾ.ಜಿ.ಪರಮೇಶ್ವರ್ ಮಾಲೀಕತ್ವದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಮತ್ತು ಡಿಗ್ರಿ ಕಾಲೇಜುಗಳ ಮೇಲೆ ಐಟಿ ದಾಳಿ ನಡೆಸಿದೆ. ಇನ್ನು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಾ.ಜಿ.ಪರಮೇಶ್ವರ್ ನಿವಾಸದ ಮೇಲೂ ಐಟಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಹಾಗೆಯೇ ಕೋಲಾರದಲ್ಲಿರುವ ಕಾಂಗ್ರೆಸ್ ಮುಖಂಡ ಆರ್.ಎಲ್ ಜಾಲಪ್ಪ ಅವರ ಒಡೆತನದ ಆರ್.ಎಲ್ ಜಾಲಪ್ಪ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನ ಮೇಲೆಯೂ ಐಟಿ ದಾಳಿಯಾಗಿದೆ. ಸುಮಾರು 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತ ನೆಲಮಂಗಲ ಪುರಸಭೆ ಜೆಡಿಎಸ್ ಸದಸ್ಯ ಶಿವಕುಮಾರ್ ನಿವಾಸದ ಮೇಲೂ ಐಟಿ ದಾಳಿಯಾಗಿದೆ. ದಾಳಿ ಕುರಿತು ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ತಮಗೆ ಮಾಹಿತಿ ಬಂದಿದೆ. ಇದಕ್ಕೆ ತಮ್ಮ ಆಕ್ಷೇಪವಿಲ್ಲ. ಕಾನೂನು ನಿಯಮಬಾಹಿರವಾಗಿ ಏನಾದರೂ ನಡೆದಿದ್ದರೆ ಅಧಿಕಾರಿಗಳು ಕ್ರಮ ಜರುಗಿಸಲಿ ಎಂದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಕಾಂಗ್ರೆಸ್ ನಾಯಕರನ್ನು ಬಿಜೆಪಿ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ರಾಜಕೀಯ ದುರುದ್ದೇಶದಿಂದ ಐಟಿ ದಾಳಿ ನಡೆಸಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಐಟಿ ಇಡಿ ದುರುಪಯೋಗಪಡಿಸಿಕೊಳ್ಳುತ್ತಿದೆ. ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.