ಹಾವೇರಿ: ಮೇ 16: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ ಸಹಯೋಗಸದಲ್ಲಿ ಶನಿವಾರ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶನಿವಾರ ರಾಷ್ಟ್ರೀಯ ಡೆಂಗ್ಯು ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಂದ್ರ ಎಂ ದೊಡ್ಡಮನಿ ಅವರು ಸೊಳ್ಳೆಗಳ ಉತ್ಪಾದನೆ ತಡೆಯಲು ತಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿರಿಸಿಕೊಳ್ಳುವುದರ ಮೂಲಕ ಡೆಂಗ್ಯೂ ರೋಗವನ್ನು ನಿಯಂತ್ರಿಸಬಹುದು. ಸಮುದಾಯದಲ್ಲಿ ವಿಶೇಷವಾಗಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ನಿರಂತರ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳಾದ ಡಾ. ಪ್ರಭಾಕರ ಕುಂದೂರ, ಡಿ.ಟಿ.ಓ ಡಾ. ನಿಲೇಶ, ಡಾ. ಜಗದೀಶ ಪಾಟೀಲ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಎಂ.ಜಯಾನಂದ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೇವರಾಜ ಎಸ್, ಕೀಟ ಶಾಸ್ತ್ರಜ್ಞರಾದ ಇಂದಿರಾ ಪಾಟೀಲ ಇತರರು ಭಾಗವಹಿಸಿದ್ದರು.