ಮಾನವ ಕಳ್ಳಸಾಗಣೆ, ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಸಿ.ಎಸ್‌. ಶಿವನಗೌಡ್ರ

ಮಾನವ ಕಳ್ಳಸಾಗಣೆ, ಜೀತ ಪದ್ಧತಿ ನಿರ್ಮೂಲನೆಗೆ ಎಲ್ಲ ಇಲಾಖೆಗಳ ಸಮನ್ವಯ ಅಗತ್ಯ: ಸಿ.ಎಸ್‌. ಶಿವನಗೌಡ್ರ  Coordination among all departments is essential to eradicate human trafficking and the bonded labour

ಲೋಕದರ್ಶನ ವರದಿ 

ಗದಗ, ಆ.4: ಮಾನವ ಕಳ್ಳಸಾಗಣೆ ಹಾಗೂ ಜೀತ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳ ವಿರುದ್ಧ ಜಾಗೃತಿ ಮೂಡಿಸಿ, ಅವುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್‌. ಶಿವನಗೌಡ್ರ ಹೇಳಿದರು.  

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ ಹಾಗೂ ಉದಯೋನ್ಮುಖ ಸ್ವಯಂಸೇವಾ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಮಾನವ ಕಳ್ಳಸಾಗಣೆ ಹಾಗೂ ಜೀತ ಪದ್ಧತಿ ವಿರೋಧಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಜೀತ ಪದ್ಧತಿ ಮತ್ತು ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸಂತ್ರಸ್ತರನ್ನು ಕೇವಲ ರಕ್ಷಿಸುವುದಷ್ಟೇ ಅಲ್ಲದೆ, ಅವರಿಗೆ ಕಾನೂನು ನೆರವು, ಪುನರ್ವಸತಿ, ಕೌಶಲ್ಯ ತರಬೇತಿ ಹಾಗೂ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದು ಹೇಳಿದರು.  

ಶಾಲೆಯಿಂದ ಹೊರಗುಳಿಯುವ ಮಕ್ಕಳು ಮಾನವ ಕಳ್ಳಸಾಗಣೆ ಮತ್ತು ಜೀತ ಪದ್ಧತಿಗೆ ಸುಲಭವಾಗಿ ಬಲಿಯಾಗುವ ಸಾಧ್ಯತೆ ಇರುವುದರಿಂದ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳುವುದು ಅಗತ್ಯ ಎಂದು ಅವರು ತಿಳಿಸಿದರು.  

ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಮಾತನಾಡಿ, ಕಡಿಮೆ ವೇತನ ನೀಡಿ ದುಡಿಸಿಕೊಳ್ಳುವುದು, ಬಲವಂತದ ದುಡಿಮೆ ಹಾಗೂ ಮಾನವೀಯತೆ ಇಲ್ಲದ ಕೆಲಸದ ವಾತಾವರಣವೂ ಜೀತ ಪದ್ಧತಿಯ ಒಂದು ರೂಪವಾಗಿದೆ. ಇಂತಹ ಪ್ರಕರಣಗಳು ಕಂಡುಬಂದರೆ ಸಾರ್ವಜನಿಕರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.  

ಗದಗ ಜಿಲ್ಲೆಯನ್ನು ಜೀತ ಪದ್ಧತಿ ಮುಕ್ತ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಲಾಖೆಗಳು ಸಮನ್ವಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಈ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.  

ಈ ಸಂದರ್ಭದಲ್ಲಿ ಮಾನವ ಕಳ್ಳಸಾಗಣೆ ಹಾಗೂ ಜೀತ ಪದ್ಧತಿ ವಿರೋಧಿ ಜಾಗೃತಿ ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಯಿತು. ಜಾಗೃತಿ ಪ್ರತಿಜ್ಞೆ ಬೋಧನೆ ಹಾಗೂ ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.  

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.