ಬೆಂಗಳೂರು, ಜೂನ್ 30: ಎಸ್.ಎಸ್.ಎಲ್.ಸಿ ಪರೀಕ್ಷೆ ಬಳಿಕ ಕೊರೊನಾ ಸೋಂಕು ತಡೆಗೆ ಮತ್ತಷ್ಟು ಬಿಗಿಕ್ರಮ ಕೈಗೊಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಸರ್ಕಾರ ಸರ್ವ ರೀತಿಯಲ್ಲೂ ಸಜ್ಜಾಗಿದೆ ಎಂದರು. ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗುತ್ತಿದೆ ಅತಿವೇಗವಾಗಿ ಹಬ್ಬುತ್ತಿರುವ ಕೊರೊನಾಗೆ ಬ್ರೇಕ್ ಹಾಕಬೇಕಿದೆ. ಆಗ ಮಾತ್ರ ಕೊರೊನಾ ತಡೆ ಸಾಧ್ಯವಾಗಲಿದೆಎಂದರು. ಸದ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈಗಲೇ ಕಠಿಣ ಕ್ರಮಕ್ಕೆ ಮುಂದಾದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ . ಹೀಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಅಶೋಕ್ ಪುನರುಚ್ಚರಿಸಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಕುರಿತು ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.