ಬೆಂಗಳೂರು, ಮಾ.31,ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ಜೆಡಿಎಸ್ ಶಾಸಕರೊಂದಿಗೆ ಕರೋನಾ ಸೋಂಕು ಹರಡದಂತೆ ತಡೆಯಲು ಜಾಗೃತಿ ಮತ್ತು ವೈದ್ಯಕೀಯ ಪರಿಕರಗಳನ್ನು ಒದಗಿಸುವಂತೆ ಸೂಚನೆ ನೀಡಿ ವಿಡಿಯೋ ಸಂವಾದ ಮೂಲಕ ಮಾತುಕತೆ ನಡೆಸಿದರು.ರಾಮನಗರದಲ್ಲಿ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಕೊರೊನಾ ತಡೆಗೆ ಮುಂಜಾಗ್ರತಾ ಕ್ರಮವಾಗಿ ರಾಮನಗರ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 200ಕ್ಕೂ ಹೆಚ್ಚು ಜನರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ 28 ಮಂದಿ ವೈದ್ಯರ ಬದಲು 8 ಮಂದಿ ಕೆಲಸ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸದ್ಯ ಒಟ್ಟು 26 ಮಂದಿ ವೈದ್ಯಾಧಿಕಾರಿಗಳು ಇದ್ದು 4 ಜನ ವೈದ್ಯರ ಕೊರತೆ ಇದೆ. ವೈದ್ಯರ ಮೂರು ಬ್ಯಾಚ್ ಗಳನ್ನು ಮಾಡಿ ಕೆಲಸ ಮಾಡಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು ಕೋವಿಡ್- 19 ವಿರುದ್ಧ ಹೋರಾಟಕ್ಕೆ ಒಳ್ಳೆಯ ಕ್ರಮ ತೆಗೆದುಕೊಂಡಿದ್ದಾರೆ ಎಂದರು.ಪಕ್ಷದಿಂದ ಜನಪ್ರತಿನಿಧಿಗಳಿಂದ ಕೂಲಿ ಕಾರ್ಮಿಕರಿಗೆ ನೆರವು ನೀಡಲು ಸಭೆ ಕರೆಯಲಾಗಿದೆ. ಕೈಗಾರಿಕಾ ನಗರಗಳಲ್ಲಿ ನಿರ್ಗತಿಕರಿಗೆ ಎನ್ ಜಿಓ ಮೂಲಕ ಸಹಾಯವಾಗುತ್ತಿದೆ. ಎಪಿಎಂಸಿಯಲ್ಲಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ಜರುಗಿಸಲು ಸೂಚಿಸಿದ್ದೇನೆ. ಈಗಾಗಲೇ ಬೆಳಗಾವಿ ಚಿಂಚೊಳ್ಳಿಯಲ್ಲಿ ಕಲ್ಲಂಗಡಿ ಬೆಳೆದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಸಹ ನಾನು ಮಾಹಿತಿ ಕಲೆ ಹಾಕಿದ್ದೇನೆ ಎಂದರು.
ಕೊರೊನಾ ವಿಚಾರದಲ್ಲಿ ರಾಮನಗರ ಜಿಲ್ಲೆಯಲ್ಲಿ ಈವರೆಗೆ ಯಾವುದೇ ಒಂದು ಗಂಭೀರ ಪ್ರಕರಣಗಳಾಗಿಲ್ಲ. ರೇಷ್ಮೆ ಗೂಡು ಬೆಳೆಗಾರರ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗಿದೆ. ರಾಮನಗರ ಮಾತ್ರವಲ್ಲದೆ ರಾಜ್ಯದ ತೋಟಗಾರಿಕಾ ಬೆಳೆಗಾರರ ಅನುಕೂಲಕ್ಕಾಗಿ ಕ್ರಮಕ್ಕೆ ಆಗ್ರಹಿಸಲಾಗಿದೆ. ತಾವು ಕಳೆದ ಮೂರು ದಿನಗಳಿಂದ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದು, ರೈತರಿಗೆ ಅನುಕೂಲವಾಗುವಂತೆ ಕ್ರಮಕ್ಕೆ ಅನುವು ಮಾಡಿಕೊಳ್ಳಲು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಮಾನವಿ ಮಾಡಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಕೆಲ ಸಾರ್ವಜನಿಕರ ಒತ್ತಾಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೆಲವರು ಮದ್ಯ ವ್ಯಸನಿಗಳಿದ್ದಾರೆ. ಏಕಾಏಕಿ ಮದ್ಯ ನಿಲ್ಲಿಸಿದ್ದರಿಂದ ಅವರ ದೇಹದ ಮೇಲೆ ಪರಿಣಾಮ ಬೀರುವುದು ಸಹಜ ಎಂದಾಗ ಅವರ ಮಾತಿಗೆ ಧ್ವನಿಗೂಡಿಸಿದ ಪತ್ನಿ ಹಾಗೂ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ, ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದರು.ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, ಈ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನಕ್ಕೆ ಮುಂದಾಗಿದೆ. ಮದ್ಯವ್ಯಸನಿಗಳಿಗೆ ಕೌನ್ಸಿಲಿಂಗ್ ಮಾಡಲು ವ್ಯವಸ್ಥೆ ಮಾಡುತ್ತಿದ್ದಾರೆ. ಈ ಕುರಿತು ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು.