ಮತ್ತೆ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

Court rejects actress Ranya Rao's bail plea again

ಬೆಂಗಳೂರು 27: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗುರುವಾರ ವಜಾಗೊಳಿಸಿದೆ.

ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 64ನೇ ಸಿಸಿಹೆಚ್​​ ಕೋರ್ಟ್​, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಈ ಮುಂಚೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ರನ್ಯಾ ರಾವ್ ಅವರ ಜಾಮೀನ ಅರ್ಜಿಯನ್ನು ವಜಾಗೊಳಿಸಿತ್ತು. ಈಗ ​ಸೆಷನ್ಸ್ ಕೋರ್ಟ್ ಸಹ ನಟಿಗೆ ಜಾಮೀನು ನಿರಾಕರಿಸಿದೆ. ರನ್ಯಾ ರಾವ್ ಈಗ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ರನ್ಯಾ ರಾವ್ ಪರವಾಗಿ ಹಿರಿಯ ವಕೀಲ ಕಿರಣ್ ಜವಳಿ ಅವರು ವಾದ ಮಂಡಿಸಿದರೆ, ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಪರವಾಗಿ ವಕೀಲ ಮಧು ರಾವ್ ವಾದ ಮಂಡಿಸಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ್ದ ಕೋರ್ಟ್, ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಅದರಂತೆ ಕೋರ್ಟ್​ ಇಂದು ರನ್ಯಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.